ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಟ್ರೀ ಪಾರ್ಕ್ ನಿರ್ಮಾಣ

ಸಂಜೆವಾಣಿ ನ್ಯೂಸ್
ಮೈಸೂರು: ಜು.17:- ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಯಾವ ವಿಧಾನಸಭಾ ಕ್ಷೇತ್ರದಲ್ಲಿ ಸಸ್ಯೋದ್ಯಾನ (ಟ್ರೀ ಪಾರ್ಕ್) ಇಲ್ಲವೋ ಅಲ್ಲಿ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕ್ ಗಳನ್ನು ನಿರ್ಮಿಸುವಂತೆ ರಾಜ್ಯ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಮೈಸೂರಿನ ಅರಣ್ಯ ಭವನದಲ್ಲಿ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಇಂದಿನ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರಿತ್ಯ ತಡೆಗೆ ವೃಕ್ಷ ಸಂಪತ್ತಿನ ಹೆಚ್ಚಳ ಅನಿವಾರ್ಯವಾಗಿದೆ ಎಂದರು.
ರಾಜ್ಯ ಸರ್ಕಾರ ಪ್ರಸಕ್ತ ವರ್ಷ 5 ಕೋಟಿ ಸಸಿಗಳನ್ನು ನೆಟ್ಟು ಪೆÇೀಷಿಸಲು ತೀರ್ಮಾನಿಸಿದ್ದು ಈ ವಲಯದಲ್ಲಿ ಹೆಚ್ಚಿನ ಸಸ್ಯಗಳನ್ನು ನೀಡುವಂತೆ ಸೂಚಿಸಿದರು.
ದಿನಗೂಲಿ ನೌಕರರಿಗೆ ಅದರಲ್ಲೂ ಹೊರಗುತ್ತಿಗೆಯ ನೌಕರರಿಗೆ ವೇತನ ವಿಳಂಬವಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು ಅಂತಹ ಹೊರಗುತ್ತಿಗೆ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಂಡು ಬಡ ನೌಕರರಿಗೆ ಸಕಾಲದಲ್ಲಿ ಸಂಬಳ ಕೈ ಸೇರುವಂತೆ ಕ್ರಮವಹಿಸಲು ಸೂಚಿಸಿದರು.
ದಸರಾ ಆನೆ ಆಯ್ಕೆ: ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಆನೆಗಳೆ ಪ್ರಧಾನ ಆಕರ್ಷಣೆಯಾಗಿದ್ದು, ಈ ಬಾರಿಯ ದಸರಾ ಮಹೋತ್ಸವಕ್ಕೆ 14 ಆನೆಗಳನ್ನು ಎಲ್ಲ ಮಾನದಂಡಗಳನ್ನು ಅನುಸರಿಸಿ ಆಯ್ಕೆ ಮಾಡುವಂತೆ ತಿಳಿಸಿದರು.
ಆನೆಗಳ ಆಯ್ಕೆ ಗಜ ಪಯಣ ಮತ್ತು ತಾಲಿಮೀನಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದಂತೆ ಕಟ್ಟೆಚ್ಚರ ವಹಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಮೈಸೂರು ನಗರವನ್ನು ಏಕಬಳಕೆ ಪ್ಲಾಸ್ಟಿಕ್ ಮುಕ್ತಗೊಳಿಸುವ ನಿರ್ಧಾರವನ್ನು ಈಗಾಗಲೇ ಪ್ರಕಟಿಸಲಾಗಿದ್ದು ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರಿನ ನಗರದಲ್ಲಿ ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ, ದಾಸ್ತಾನು, ಮಾರಾಟ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ಸೂಚಿಸಿದರು.
ಪ್ಲಾಸ್ಟಿಕ್ ಬಳಕೆ ನಿರ್ಬಂಧಿಸಲು ಜನಜಾಗೃತಿ ಮೂಡಿಸಲು ಮತ್ತು ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ನೆರವು ಪಡೆಯಲು ತಿಳಿಸಿದರು,ಸಭೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.