ಜಿ.ಪಂ ಸಿಇಒರಿಂದ ವಿವಿಧ ಕಾಮಗಾರಿ ವೀಕ್ಷಣೆ

ರಾಯಚೂರು,ನ.೧೮-ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿ ಸ್ಥಳಕ್ಕೆ ನ.೧೭ರ ಬುಧವಾರ ದಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್ ಭೇಟಿ ನೀಡಿ, ಪರಿಶೀಲನೆ ಮಾಡಿದರು.
ಬಿಜನಗೇರಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಡುಗೆ ಕೋಣೆ, ಬಚ್ಚಲು ಗುಂಡಿ ಕಾಮಗಾರಿಯನ್ನು ವೀಕ್ಷಣೆ ಮಾಡಿದ ನಂತರ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಿದರು.
ಬಿಚ್ಚಾಲಿ ಗ್ರಾಮದಲ್ಲಿ ನಿರ್ಮಾಣದ ಹಂತದಲ್ಲಿರುವ ನೂತನ ಗ್ರಾಮ ಪಂಚಾಯತಿ ಕಟ್ಟಡ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು ಕಾಮಗಾರಿ ನಡೆಯುತ್ತಿರುವ ಬಗ್ಗೆ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿ, ನಂತರ ಭೋಜನಾಲಯ ಕೋಣೆ ಮತ್ತು ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಅನುಷ್ಠಾನಗೊಳಿಸುತ್ತಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಬಗ್ಗೆ ಮಾಹಿತಿ ಪಡೆದುಕೊಂಡರು.
ಗಿಲ್ಲೆಸೂಗೂರು ಗ್ರಾಮ ಪಂಚಾಯತಿಯಲ್ಲಿ ಬರುವ ತುಂಗಭದ್ರ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಕೇಂದ್ರ, ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ತಾ,ಪಂ ಸಹಾಯಕ ನಿರ್ದೇಶಕರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮೀಣ ಮತ್ತು ಕುಡಿಯುವ ನೀರು ಅಭಿಯಂತರರು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು ಮತ್ತು ಗ್ರಾ.ಪಂ ಸಿಬ್ಬಂದಿ ವರ್ಗದವರು ಸೇರಿದಂತೆ ಇತರರು ಇದ್ದರು.