ಜುಲೈ ೫ ರಂದು  ವೀರಶೈವ ಲಿಂಗಾಯತ ಸಮುದಾಯದ ಸಚಿವರಿಗೆ- ಶಾಸಕರಿಗೆ ಸನ್ಮಾನ

ಶಿವಮೊಗ್ಗ.ಜೂ.೨೫ : ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಸಚಿವರು-ಸಂಸದರು ಹಾಗೂ ಶಾಸಕರಿಗೆ ಬೆಂಗಳೂರಿನಲ್ಲಿ ಜುಲೈ ೫ ರಂದು ಅದ್ಧೂರಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮಧ್ಯಕರ್ನಾಟಕ ಸಂಚಾಲಕರಾದ ಶ್ರೀಮತಿ ಲಲಿತಾ ಪ್ರಕಾಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಈಗಾಗಲೇ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಮಾಜದ ಏಳಿಗೆಗಾಗಿ ಕಾರ್ಯನಿರ್ವಹಿಸುತ್ತಿದೆ. ಸಮಾಜದ ಅನೇಕ ಸಮಸ್ಯೆಗಳಿಗಾಗಿ ಹೋರಾಟ ಮಾಡುವಂತದ್ದು, ಹಾಗೂ ಅಭಿವೃದ್ಧಿಗಾಗಿ ನಿರಂತರ ಸಭೆ ಸಮಾರಂಭಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರಂತೆ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬಂದಿರುವ ವೀರಶೈವ-ಲಿಂಗಾಯತ ಸಮುದಾಯದ ಎಲ್ಲಾ ಸಚಿವರು ಹಾಗೂ ಪಕ್ಷಾತೀತವಾಗಿ ಎಲ್ಲಾ ಶಾಸಕರನ್ನು ಸನ್ಮಾನಿಸುವ ಹಮ್ಮಿಕೊಳ್ಳಲಾಗಿದೆ ಎಂದರು.ಕಾರ್ಯಕ್ರಮವನ್ನು ಜುಲೈ ೫ ರಂದು ಸಂಜೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದು ಇದರ ದಿವ್ಯ ಸಾನಿಧ್ಯ ವನ್ನು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರಗಳಾದ ಪ್ರಸನ್ನ ರೇಣುಕಾ ಡಾ: ವೀರಸೋಮೇಶ್ವರ ರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ವಹಿಸಲಿದ್ದಾರೆಂದರು.
ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಗಳ ಪೂಜ್ಯ ಸ್ವಾಮೀಜಿಯವರು, ಗಣ್ಯರು, ಉದ್ಯಮಿಗಳು ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯದ ಉಪಸ್ಥಿತಿಯಲ್ಲಿ ನಡೆಯಲಿದ್ದು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.