ಜು.10: ಕೊಬ್ಬರಿ ಬೆಂಬಲ ಬೆಲೆಗೆ ಆಗ್ರಹಿಸಿ ಪ್ರತಿಭಟನೆ

ಗುಬ್ಬಿ, ಜು. ೮- ಕೊಬ್ಬರಿಗೆ ಬೆಂಬಲ ಬೆಲೆ ನಿಗದಿಗೊಳಿಸಿ ಪ್ರೋತ್ಸಾಹ ಧನ ನೀಡಬೇಕೆಂದು ಆಗ್ರಹಿಸಿ ಜು. ೧೦ ರಂದು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎಂ. ಗೋವಿಂದರಾಜು ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸುಮಾರು ೧೩ ಜಿಲ್ಲೆಗಳಲ್ಲಿ ತೆಂಗು ಪ್ರಮುಖ ಬೆಳೆಯಾಗಿದ್ದು ಲಕ್ಷಾಂತರ ಕುಟುಂಬಗಳು ಜೀವನೋಪಾಯಕ್ಕಾಗಿ ತೆಂಗು ಬೆಳೆಯ ಮೇಲೆ ಅವಲಂಬಿತರಾಗಿದ್ದಾರೆ ಎಂದರು.
ಕಳೆದ ವರ್ಷ ೧೯ ಸಾವಿರ ರೂ.ಗಳ ಬೆಲೆಯಿಂದ ಇದ್ದಕ್ಕಿದ್ದಂತೆ ಕೊಬ್ಬರಿಗೆ ಬೆಲೆ ೭೫೦೦ ರೂ.ಗಳಿಗೆ ಕುಸಿದಿದೆ. ಕೊಬ್ಬರಿ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದು ಕೂಡಲೇ ರಾಜ್ಯ ಮತ್ತು ಕೇಂದ್ರ ಸರ್ಕಾರ ಎಚ್ಚೆತ್ತು ಕೇಂದ್ರ ಸರ್ಕಾರ ಒಂದು ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ ೨೦ ಸಾವಿರ ರೂ. ಬೆಂಬಲ ಬೆಲೆ ನಿಗದಿಗೊಳಿಸಬೇಕು. ರಾಜ್ಯ ಸರ್ಕಾರ ೫ ಸಾವಿರ ರೂ. ಪ್ರೋತ್ಸಾಹ ಧನ ನೀಡಬೇಕು. ಬೆಂಬಲ ಬೆಲೆಯಡಿ ಖರೀದಿಸಲು ನಫೆಡ್ ಕೇಂದ್ರಗಳನ್ನು ತೆರೆಯಬೇಕು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ತಾಲ್ಲೂಕು ಅಧ್ಯಕ್ಷ ಕೆ.ಎನ್. ವೆಂಕಟೇಗೌಡ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರಡು ರೈತರ ಬಗ್ಗೆ ಉದಾಸಿನ ತೋರುತ್ತಿದ್ದು ರೈತರಿಗೆ ನ್ಯಾಯ ಒದಗಿಸಿಕೊಡುವಲ್ಲಿ ಸರ್ಕಾರಗಳು ವಿಫಲವಾಗಿವೆ. ಜು.೧೦ರಂದು ತಾಲ್ಲೂಕಿನ ಸಾವಿರಾರು ಸಂಖ್ಯೆ ರೈತರು ಭಾಗವಹಿಸಿ ಯಶಸ್ವಿಗೊಳಿಸಬೇಕು. ಪ್ರತಿಭಟನೆಗೆ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರಪ್ಪ, ಕೊಬ್ಬರಿ ಬೆಳೆಗಾರರ ಹೋರಾಟ ಸಮಿತಿ ಅಧ್ಯಕ್ಷ ಯೋಗೀಶ್ವರ ಸ್ವಾಮಿ, ತೆಂಗು ಬೆಳೆಗಾರರ ಸಂಘದ ಅಧ್ಯಕ್ಷ ಮೃತ್ಯುಂಜಯಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ನೂಲನೂರು ಶಂಕರಪ್ಪ, ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಸಂಚಾಲಕ ಯತಿರಾಜು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ. ಲೋಕೇಶ್ ಸೇರಿದಂತೆ ತಾಲ್ಲೂಕು ಮಟ್ಟದ ಪದಾಧಿಕಾರಿಗಳು ಭಾಗವಹಿಸಿದ್ದರು.