ಜೂನ್ ವೇಳೆಗೆ 9 ಕೋಟಿ ಡೋಸ್ ಲಸಿಕೆ

ನವದೆಹಲಿ, ಮೇ ೧೩- ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ನಿತ್ಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಅಭಾವ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ಉತ್ಪಾದನೆ ಹೆಚ್ಚು ಮಾಡುವಂತೆ ಔಷಧ ತಯಾರಿಕಾ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
ಪುಣೆಯ ಭಾರತೀಯ ಸೆರಂ ಸಂಸ್ಥೆ ಮತ್ತು ಹೈದರಾಬಾದಿನ ಭಾರತ್ ಬಯೋಟೆಕ್ ಸಂಸ್ಥೆಯ ಮುಂದಿನ ನಾಲ್ಕು ತಿಂಗಳಲ್ಲಿ ತಮ್ಮ ಸಂಸ್ಥೆಯಲ್ಲಿ ಉತ್ಪಾದಿಸುವ ಲಸಿಕೆಯ ವಿವರವನ್ನು ಕೇಂದ್ರ ಸರ್ಕಾರಕ್ಕೆ ನೀಡಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್, ದೇಶದಲ್ಲಿ ಲಸಿಕೆ ಕೊರತೆ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ಎರಡು ಔಷಧ ತಯಾರಿಕಾ ಸಂಸ್ಥೆಗಳಿಂದ ಲಸಿಕಾ ಪ್ರಮಾಣವನ್ನು ಹೆಚ್ಚಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಮೇ ತಿಂಗಳ ಅಂತ್ಯದ ವೇಳೆಗೆ ೮ ಕೋಟಿ ಮತ್ತು ಜೂನ್ ತಿಂಗಳ ವೇಳೆಗೆ ೯ ಕೋಟಿ ಲಸಿಕೆ ಸಿದ್ಧವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಲಸಿಕೆ ಅಭಾವ ಎದುರಿಸುತ್ತಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಮಾತುಕತೆ ನಡೆಸಲಾಗಿದ್ದು, ಆ ರಾಜ್ಯಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಅವರಿಗೆ ಬೇಕಾಗುವ ಲಸಿಕೆ ಪೂರೈಕೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಸ್ಥಗಿತ:
ಲಸಿಕೆ ಕೊರತೆ ಇರುವ ಹಿನ್ನೆಲೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ, ದೆಹಲಿ ಸೇರಿದಂತೆ, ದೇಶದ ಹಲವು ರಾಜ್ಯಗಳು ೧೮ ರಿಂದ ೪೪ ವರ್ಷ ವಯೋಮಾನದವರಿಗೆ ಲಸಿಕೆ ಹಾಕುವುದನ್ನು ನಿಲ್ಲಿಸಿವೆ ಎಂದು ಅವರು ಹೇಳಿದ್ದಾರೆ.
ದೇಶದ ಎರಡು ವರ್ಷದ ತಯಾರಿಕಾ ಸಂಸ್ಥೆಗಳು ಮುಂದಿನ ದಿನಗಳಲ್ಲಿ ಲಸಿಕೆ ಉತ್ಪಾದನೆಯ ಪ್ರಮಾಣವನ್ನು ಹೆಚ್ಚು ಮಾಡಲಿದ್ದು, ಎಲ್ಲ ರಾಜ್ಯಗಳಿಗೂ ಅಗತ್ಯ ಪ್ರಮಾಣದಲ್ಲಿ ಲಸಿಕೆಯನ್ನು ಪೂರೈಕೆ ಮಾಡಲಾಗುವುದು ಎಂದು ಕೂಡ ಅವರು ತಿಳಿಸಿದ್ದಾರೆ.