ಜೂ.,೧೦ ಕ್ಕೆ ಕರವೇಯಿಂದ ಆನ್ ಲೈನ್ ಪ್ರತಿಭಟನೆ

ದಾವಣಗೆರೆ. ಜೂ.೩: ಬರುವ ಜೂನ್ 10 ರಂದು ಬೆಳಿಗ್ಗೆ 9 ಗಂಟೆ 10 ನಿಮಿಷಕ್ಕೆ  ಒಂದೇ ದಿನ, ಒಂದೇ ಸಮಯಕ್ಕೆ  ನಾಡಿನಾದ್ಯಂತ ಒಂದು ಸಾವಿರಕ್ಕೂ ಹೆಚ್ಚು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದ್ದು, “ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ” ಎಂದು ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳನ್ನು ಒತ್ತಾಯಿಸಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ ಎಂ.ಎಸ್ ರಾಮೇಗೌಡ ಹೇಳಿದರು.ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷರ ಜೂಮ್ ಸಭೆಯಲ್ಲಿ ಈ ಐತಿಹಾಸಿಕ ನಿರ್ಣಯ ಅಂಗೀಕರಿಸಲಾಗಿದ್ದು, 
ಕರ್ನಾಟಕದ ಪ್ರತಿಯೊಬ್ಬರಿಗೂ ಜೂನ್ ತಿಂಗಳ ಅಂತ್ಯದೊಳಗೆ ಮೊದಲನೇ ಡೋಸ್ ಕೋವಿಡ್ ಲಸಿಕೆ ಮತ್ತು ಸೆಪ್ಟೆಂಬರ್ ತಿಂಗಳ ಅಂತ್ಯದೊಳಗೆ ಎರಡನೇ ಡೋಸ್ ಉಚಿತವಾಗಿ ನೀಡಬೇಕು. ಚುನಾವಣಾ ಬೂತ್ ಗಳು, ಪೊಲೀಯೋ ವ್ಯಾಕ್ಸಿನ್ ಬೂತ್ ರಚನೆ ಮಾಡುವ ಹಾಗೆ ನಾಗರಿಕರು ನಡೆದುಹೋಗುವಷ್ಟು ಹತ್ತಿರದಲ್ಲೇ ಲಸಿಕೆ ಬೂತ್ ಸ್ಥಾಪಿಸಿ, ಜನರನ್ನು ಕಾಯಿಸದೆ, ಸತಾಯಿಸದೆ ಲಸಿಕೆಗಳನ್ನು ನೀಡಬೇಕು ಎಂಬುದು ಕರ್ನಾಟಕ ರಕ್ಷಣಾ ವೇದಿಕೆಯ ಹಕ್ಕೊತ್ತಾಯವಾಗಿರಲಿದೆ.ನಾಡಿನ ಎಲ್ಲ ಜಿಲ್ಲೆ, ತಾಲ್ಲೂಕು, ಹೋಬಳಿ, ಹಳ್ಳಿಗಳಲ್ಲಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮತ್ತು ಈ ಪ್ರತಿಭಟನೆಯನ್ನು ಬೆಂಬಲಿಸುವ ಸಂಘ ಸಂಸ್ಥೆಗಳು, ಸಾಮಾಜಿಕ ಕಾರ್ಯಕರ್ತರು, ಸಾಮಾನ್ಯ ಜನರು ತಾವು ಇರುವ ಸ್ಥಳಗಳಲ್ಲೇ ತಮ್ಮ ತಮ್ಮ ಮನೆಗಳಿಂದ ಹೊರಬಂದು, ಪ್ರಚಾರ ಫಲಕಗಳನ್ನು ಹಿಡಿದು ಪ್ರತಿಭಟಿಸುತ್ತಾರೆ. ಈ ಸಂದರ್ಭದಲ್ಲಿ ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಲಾಗುವುದು. ಮಾಸ್ಕ್ ಧರಿಸಲಾಗುವುದು, ದೈಹಿಕ ಅಂತರ ಕಾಪಾಡಲಾಗುವುದು.*ಒಂದು ಸಾವಿರಕ್ಕೂ ಹೆಚ್ಚು ಪ್ರತಿಭಟನೆಗಳ ಫೊಟೋ, ವಿಡಿಯೋಗಳನ್ನು ಗೂಗಲ್ ಡ್ರೈವ್ ಲಿಂಕ್ ಮೂಲಕ ಸರ್ಕಾರಕ್ಕೆ, ಮಾಧ್ಯಮಗಳಿಗೆ ತಲುಪಿಸಲಾಗುವುದು ಎಂದರು.