ಜೆಜೆಎಂ ಕಾಮಗಾರಿ ಪೂರ್ಣಗೊಳಿಸಲು ಗಡುವು


ಸಂಜೆವಾಣಿ ವಾರ್ತೆ
ಕೊಪ್ಪಳ ಜು:01: ಜಲಜೀವನ ಮಿಷನ್ ಯೋಜನೆಯಡಿ ಕೊಪ್ಪಳ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಕಾಮಗಾರಿಗಳನ್ನು ಒಂದು ತಿಂಗಳೊಳಗಾಗಿ ಪೂರ್ಣಗೊಳಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸಚಿವರು ಗಡುವು  ನೀಡಿದರು. ಜೆಜೆಎಂ ಕಾಮಗಾರಿಯ ಪೈಪ್ ಲೈನ್  ಕಾರ್ಯವನ್ನು ನಿಯಮಾನುಸಾರ ನಡೆಸಬೇಕು ಎಂದು ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜೆಜೆಂ ಕಾಮಗಾರಿ ಸರಿಯಾಗಿ ನಡೆದಿಲ್ಲ. ಚರಂಡಿಯಲ್ಲಿ ಜೆಜೆಎಂ ಪೈಪ್ ಹಾಕಿ ಬಿಲ್ಲು ಪಾವತಿಸಲಾಗಿದೆ. ಸಿಸಿ ರೋಡ್ ಇದ್ದಲ್ಲಿ ಜೆಜೆಎಂ ಕಾಮಗಾರಿ ಬಳಿಕ ಸಿಸಿ ರೋಡ್ ದುರಸ್ತಿ ಕಾರ್ಯಕೈಗೊಂಡಿಲ್ಲ ಎನ್ನುವ ದೂರುಗಳಿವೆ. ಆದ್ದರಿಂದ ಈ ಬಗ್ಗೆ ಪರಿಶೀಲಿಸಲು ವಿಧಾನಸಭಾ ಕ್ಷೇತ್ರವಾರು ನೋಡಲ್ ಅಧಿಕಾರಿಗಳನ್ನು ಹಾಗೂ ಹೋಬಳಿವಾರು ಇತರ ಅಧಿಕಾರಿಗಳನ್ನು ನೇಮಕ ಮಾಡಿ ವರದಿ ಸಲ್ಲಿಸಲು ಕ್ರಮಕೈಗೊಳ್ಳಬೇಕು. ಶಾಲೆಗಳ ಕೊಠಡಿ ನಿರ್ಮಾಣ, ಕಟ್ಟಡ ನಿರ್ಮಾಣ ಹಾಗೂ ಬಾಕಿ ಇರುವ ಎಲ್ಲ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಬೇಕು. ಆಯಾ ಕಡೆಗಳಲ್ಲಿ ಪದವಿ ಪೂರ್ವ ಶಿಕ್ಷಣದ ಸೌಕರ್ಯ ಒದಗಿಸಲು ಅನುಕೂಲವಾಗುವಂತೆ ಪ್ರೌಢಶಾಲೆಗಳನ್ನು ಉನ್ನತೀಕರಿಸಲು ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜೆಜೆಎಂ ಕಾಮಗಾರಿ ಪರಿಶೀಲನೆ: ಜಿಲ್ಲೆಯಲ್ಲಿನ ಜೆಜೆಎಂ ಕಾಮಗಾರಿಗಳ ಸ್ಥಿತಿಗತಿ ಕುರಿತು ಪರಿಶೀಲನಾ ಕಾರ್ಯ ನಡೆಸಿ ವರದಿ ಸಲ್ಲಿಸಲಾಗುವುದು. ಶಾಲಾ ಅಡುಗೆ ಕೋಣೆ, ಕೊಠಡಿ ನಿರ್ಮಾಣ ಹಾಗೂ ಇತರೆ ಕಾಮಗಾರಿಗಳನ್ನು ಕಾಲಮಿತಿಯೊಳಗೆ ನಡೆಸಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಸಂಸ್ಥೆಗಳೊಂದಿಗೆ ಸಭೆ ನಡೆಸಿ ಸೂಚಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಅವರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ದೊಡ್ಡನಗೌಡ ಪಾಟೀಲ, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು, ಜಿಪಂ ಸಿಇಓ ರಾಹುಲ್ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇಧಿ, ಸಹಾಯಕ ಆಯುಕ್ತರಾದ ಬಸವಣ್ಣಪ್ಪ ಕಲಶೆಟ್ಟಿ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ, ಜಿಪಂ ಮುಖ್ಯ ಯೋಜನಾಧಿಕಾರಿ ಮಂಜುನಾಥ ಡಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.