ಗೌರಿಬಿದನೂರು, ಏ.೨೭-ನಗರದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸಿಪಿಐಎಂ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಒಮ್ಮತದಿಂದ ಜೆಡಿಎಸ್ ಪಕ್ಷಕ್ಕೆ ಬೆಂಬಲ ಸೂಚಿಸುವುದಾಗಿ ತಿಳಿಸಿದ್ದಾರೆ.
ಈ ವೇಳೆ ಸಿಪಿಐಎಂ ಮತ್ತು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಸಿದ್ದಗಂಗಪ್ಪ ಮಾತನಾಡಿ, ದೇಶ ಹಾಗೂ ರಾಜ್ಯದಲ್ಲಿ ಕಳೆದ ೫ ವರ್ಷದಿಂದ ಬಿಜೆಪಿ ಸರ್ಕಾರದಿಂದ ಸಾಮಾನ್ಯ ಜನರ ಬದುಕು ಸಂಕಷ್ಟಕ್ಕೆ ಈಡಾಗಿದೆ. ದಿನಬಳಕೆಯ ವಸ್ತುಗಳ ಬೆಲೆ ದುಪ್ಪಟ್ಟಾಗಿದ್ದು ಇದರಿಂದಾಗಿ ತೀವ್ರ ತತ್ವಾರ ಪಡುವಂತಾಗಿದೆ. ಆದ್ದರಿಂದಾಗಿ ಎಲ್ಲ ವರ್ಗದ ಜನರ ಶ್ರೇಯೋಭಿಲಾಷೆಯನ್ನು ಬಯಸುವ ಹಾಗೂ ಜಾತ್ಯಾತೀತವಾಗಿ ಜನರ ಅಭಿವೃದ್ಧಿಗಾಗಿ ಶ್ರಮಿಸುವಂತಹ ಜೆಡಿಎಸ್ ಪಕ್ಷಕ್ಕೆ ನಮ್ಮ ಸಂಘಟನೆಯ ಸಂಪೂರ್ಣ ಬೆಂಬಲ ನೀಡಲಾಗುವುದು. ಸ್ಥಳೀಯ ನಾಯಕರಾದ ಸಿ.ಆರ್.ನರಸಿಂಹಮೂರ್ತಿ ರವರ ಪರವಾಗಿ ಕಾರ್ಯನಿರ್ವಹಿಸಲು ಬದ್ಧರಾಗಿದ್ದೇವೆ. ನೆರೆಯ ಬಾಗೇಪಲ್ಲಿಯಲ್ಲಿ ಸಿಪಿಐಎಂ ಅಭ್ಯರ್ಥಿಗೆ ಕುಮಾರಣ್ಣನವರು ಸಂಪೂರ್ಣ ಬೆಂಬಲ ನೀಡುತ್ತಿದ್ದಾರೆ. ಆದ್ದರಿಂದ ಈ ಭಾಗದಲ್ಲಿ ಜೆಡಿಎಸ್ ಪಕ್ಷದೊಂದಿಗೆ ಒಮ್ಮತದಿಂದ ಕಾರ್ಯನಿರ್ವಹಿಸುತ್ತೇವೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷರಾದ ಮಾಳಪ್ಪ ಮಾತನಾಡಿ, ರಾಜ್ಯದ ರೈತರ ಹಿತಕ್ಕಾಗಿ ಕುಮಾರಣ್ಣನವರ ಅಧಿಕಾರಾವಧಿಯಲ್ಲಿ ಸಾಕಷ್ಟು ಜನಪರವಾದ ಕಾರ್ಯಗಳನ್ನು ಮಾಡಲಾಗಿದೆ. ಜತೆಗೆ ತಾಲ್ಲೂಕಿನಲ್ಲಿ ೧೬ ಸಾವಿರಕ್ಕೂ ಹೆಚ್ಚು ರೈತ ಕುಟುಂಬಗಳ ಸಾಲವನ್ನು ಮನ್ನಾ ಮಾಡುವ ಮೂಲಕ ಅವರ ಬದುಕಿಗೆ ಬೆಳಕು ನೀಡುವ ಕೆಲಸ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಸಿ.ಆರ್.ನರಸಿಂಹಮೂರ್ತಿ ರವರಿಗೆ ಸಂಪೂರ್ಣ ಬೆಂಬಲ ಸೂಚಿಸಲಾಗುವುದು ಎಂದು ಹೇಳಿದರು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷರಾದ ಸಿ.ಮಂಜುನಾಥರೆಡ್ಡಿ ಮಾತನಾಡಿ, ಪಕ್ಷದಲ್ಲಿ ತನ್ನದೇ ತತ್ವ, ಸಿದ್ದಾಂತ ಮತ್ತು ಆದರ್ಶಗಳನ್ನು ಹೊಂದಿರುವ ಜೆಡಿಎಸ್ ಪಕ್ಷಕ್ಕೆ ಸಿಪಿಐಎಂ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಸಂಪೂರ್ಣ ಬೆಂಬಲ ನೀಡಿರುವುದು ಸ್ವಾಗತಾರ್ಹವಾಗಿದೆ. ಇವರ ಪ್ರೀತಿ, ವಿಶ್ವಾಸ ಮತ್ತು ನಂಬಿಕೆಗಳನ್ನು ಉಳಿಸಿಕೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ನಿಮ್ಮೆಲ್ಲರ ಕಷ್ಟಸುಖಗಳಲ್ಲಿ ಭಾಗಿಯಾಗುತ್ತೇವೆ. ಪಕ್ಷ ಸಂಘಟನೆಯಲ್ಲಿ ಎಲ್ಲರೂ ಸಕ್ರೀಯವಾಗಿ ಭಾಗಿಯಾಗೋಣ ಎಂದು ಹೇಳಿದರು.