ಬೆಂಗಳೂರು, ಮಾ. ೨೭- ತುಮಕೂರಿನ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ (ವಾಸು) ಅವರು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿರುವ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಸ್ವಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ನನ್ನ ರಾಜೀನಾಮೆ ಅಂಗೀಕರಿಸಿ ಎಂದು ಅವರು ಕೋರಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗುಬ್ಬಿಯಿಂದ ಜೆಡಿಎಸ್ ಪಕ್ಷದಿಂದ ಆಯ್ಕೆಯಾಗಿದ್ದ ಎಸ್.ಆರ್. ಶ್ರೀನಿವಾಸ್ ಅವರು ನಂತರ ಜೆಡಿಎಸ್ ನಾಯಕರ ಬಗ್ಗೆ ಅಸಮಾಧಾನಗೊಂಡು ಅಂತರ ಕಾಯ್ದುಕೊಂಡಿದ್ದರು. ಜತೆಗೆ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಸೂಚನೆಯನ್ನು ಧಿಕ್ಕರಿಸಿದ ಆರೋಪಕ್ಕೂ ಎಸ್.ಆರ್. ಶ್ರೀನಿವಾಸ್ ಒಳಗಾಗಿದ್ದರು. ಈ ಎಲ್ಲ ಬೆಳವಣಿಗೆಗಳ ನಂತರ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು.
ಜೆಡಿಎಸ್ ನಾಯಕರಿಂದ ದೂರ ಇದ್ದ ಶ್ರೀನಿವಾಸ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಆಪ್ತ ವಲಯದಲ್ಲಿ ಕಾಣಿಸಿಕೊಂಡು ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿದ್ದರು.
ಅದರಂತೆ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇನ್ನು ೨-೩ ದಿನಗಳಲ್ಲಿ ಅವರು ಕಾಂಗ್ರೆಸ್ ಸೇರ್ಪಡೆಯಾಗುವರು ಎಂದು ಹೇಳಲಾಗಿದೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಸ್.ಆರ್. ಶ್ರೀನಿವಾಸ್ ಅವರು ಇಂದು ಬೆಳಿಗ್ಗೆಯೇ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಶ್ರೀನಿವಾಸ್ ಅವರ ಕಾಂಗ್ರೆಸ್ ಸೇರ್ಪಡೆಗೆ ಹಸಿರು ನಿಶಾನೆ ಸಿಕ್ಕಿದ್ದು, ಸದ್ಯದಲ್ಲೇ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಸಿದ್ದರಾಮಯ್ಯನವರ ಆಪ್ತ ಮೂಲಗಳು ಹೇಳಿವೆ.