ಜೆಪಿ ನಡ್ಡಾ ಅವಧಿ 2024 ಜೂನ್ ವರೆಗೆ ವಿಸ್ತರಣೆ: ಅಮಿತ್ ಶಾ

ನವವದೆಹಲಿ,ಜ.17- ದೇಶದ 9 ರಾಜ್ಯಗಳಿಗೆ ಈ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ಮತ್ತು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಅಧಿಕಾರವಧಿಯನ್ನು 2024ರ ಜೂನ್ ವರೆಗೆ ವಿಸ್ತರಿಸಲು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ನಿರ್ಧರಿಸಿದೆ.

ದೆಹಲಿಯಲ್ಲಿ ನಡೆದ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ಕೇಂದ್ರದ ಗೃಹ ಸಚಿವ ಅಮಿತ್ ಶಾ ಪ್ರಕಟಿಸಿದ್ದು ಜೆಪಿ ನಡ್ಡಾ ಇನ್ನೂ ಒಂದು ವರ್ಷ 6 ತಿಂಗಳು ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದರು.

ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಸರ್ವಾನುಮತದಿಂದ ಜೆಪಿ ನಡ್ಡಾ ಅವರ ಅಧಿಕಾರವಧಿ ವಿಸ್ತರಣೆ ಮಾಡಲು ಸರ್ವ ಸಮ್ಮತ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಡಿಸಿದ ನಿರ್ಣಯಕ್ಕೆ ಸಭೆ ಸರ್ವಾನುಮತದಿಂದ ಅಂಗೀಕಾರ ಮಾಡಿ ಜೆಪಿ ನಡ್ಡಾ ಅವರನ್ನು ಮುಂದುವರಿಸಲು ನಿರ್ಧರಿಸಲಾಗಿದೆ ಎಂದರು.
2019ರಿಂದ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷರಾಗಿ ಜೆಪಿ ನಡ್ಡಾ ಕಾರ್ಯನಿರ್ವಹಿಸುತ್ತಿದ್ದಾರೆ.

ಮತ್ತೊಮ್ಮೆ ಮೋದಿ

2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ ಎನ್ನುವ ವಿಶ್ವಾಸವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂದಿನ ಲೋಕಸಭೆ ಚುನಾವಣೆಯನ್ನು ಎದುರಿಸಿ ಅಧಿಕಾರಕ್ಕೆ ಬರುತ್ತೇವೆ. ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಅವರು ಹೇಳಿದ್ದಾರ.