ಜೈಲು ಪಾಲಾದ ಮಾಜಿ ಮೇಯರ್ ಸಂಪತ್ ರಾಜ್

ಬೆಂಗಳೂರು, ನ.20- ಡಿಜೆ-ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ನಾಲ್ಕು ದಿನಗಳ ಕಾಲ
ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.

ಆರೋಪಿ ಸಂಪತ್ ರಾಜ್​ನ ಸಿಸಿಬಿ ಪೊಲೀಸರು ನಾಲ್ಕು ದಿನಗಳ ಹಿಂದೆಯಷ್ಟೇ ಬಂಧಿಸಿ, ಮೂರು ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ ತನಿಖಾಧಿಕಾರಿಗಳು, ಶುಕ್ರವಾರ ಮಧ್ಯಾಹ್ನ ನಗರದ 67ನೇ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್​ಗೆ ಹಾಜರುಪಡಿಸಿದರು. 

ಕೆಲ ಕಾಲ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶೆ ಕಾತ್ಯಾಯಿನಿ ಅವರು ಆರೋಪಿ ಸಂಪತ್ ರಾಜ್​ನ ನ. 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ವೇಳೆ ತಮ್ಮ ಬೆಂಬಲಿಗರಿಗೆ ಕುಮ್ಮಕ್ಕು ನೀಡಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಹಚ್ಚಿಸಿದ ಆರೋಪ ಸಂಪತ್ ರಾಜ್ ವಿರುದ್ಧ ಕೇಳಿ ಬಂದಿತ್ತು. ಈ ಹಿನ್ನೆಲೆ ಸಿಸಿಬಿ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದ್ದರು.