ಜೋಶಿ, ಪರಮೇಶ್ ಭೇಟಿ ಟಿಕೆಟ್‌ಗೆ ಲಾಬಿ

ತುಮಕೂರು, ಫೆ. ೨೫- ಲೋಕಸಭಾ ಟಿಕೆಟ್‌ಗಾಗಿ ಆಕಾಂಕ್ಷಿಗಳ ಕಸರತ್ತು ಮುಂದುವರೆದಿದ್ದು, ಮಹತ್ವದ ಬೆಳವಣಿಗೆಯಲ್ಲಿ ತುಮಕೂರು ಲೋಕಸಭಾ ಟಿಕೆಟ್ ಆಕಾಂಕ್ಷಿ ಡಾ.ಎಸ್.ಪರಮೇಶ್ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿ ಟಿಕೆಟ್‌ಗಾಗಿ ಮನವಿ ಸಲ್ಲಿಸಿದ್ದಾರೆ. ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಜಿಲ್ಲೆಯ ಪ್ರಮುಖ ಬಿಜೆಪಿ ಹಾಗೂ ಲಿಂಗಾಯತ ಮುಖಂಡರೊಂದಿಗೆ ತೆರಳಿದ ಡಾ.ಎಸ್.ಪರಮೇಶ್ ತಮ್ಮ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಪ್ರಹ್ಲಾದ್ ಜೋಶಿ ಟಿಕೆಟ್ ಅಂತಿಮಗೊಳಿಸಲು ಇನ್ನೂ ಸಾಕಷ್ಟು ಸಮಯವಿದೆ. ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲಿ ನಿಮ್ಮ ಮನವಿಗೆ ಪೂರಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ವೈದ್ಯರ ಕೋಟಾದಡಿ ಟಿಕೆಟ್
ಕೇಂದ್ರ ಬಿಜೆಪಿಯಲ್ಲಿ ಈ ಬಾರಿ ಲೋಕಸಭಾ ಚುನಾವಣೆಗೆ ವಿವಿಧ ಕ್ಷೇತ್ರಗಳಲ್ಲಿ ದುಡಿದ ಪ್ರಮುಖರಿಗೆ ಟಿಕೆಟ್ ಕೊಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ವೈದ್ಯರಿಗಾಗಿ ಕೆಲ ಕ್ಷೇತ್ರಗಳನ್ನು ಮೀಸಲಿಡುತ್ತಾರೆ ಎನ್ನುವ ಮಾತುಗಳು ಬಿಜೆಪಿ ಮೂಲಗಳಿಂದ ಕೇಳಿ ಬರುತ್ತಿವೆ. ಈ ಹಿನ್ನಲೆಯಲ್ಲಿ ಡಾ.ಎಸ್.ಪರಮೇಶ್ ವೈದ್ಯರ ಕೋಟಾದಡಿ ಟಿಕೆಟ್ ನೀಡುವ ಸಾಧ್ಯತೆಗಳಿದ್ದರೆ ತಮ್ಮನ್ನು ಪರಿಗಣಿಸುವಂತೆ ಕೋರಿರುವುದು ಚರ್ಚೆಗೆ ಗ್ರಾಸವಾಗಿದೆ.
ತುಮಕೂರು ಲೋಕಸಭಾ ಚುನಾವಣೆಯಲ್ಲಿ ನಾನು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದು, ಪಕ್ಷದ ಪ್ರಮುಖರನ್ನು ಭೇಟಿ ಮಾಡುತ್ತಿದ್ದೇನೆ. ಪಕ್ಷದ ಹಿರಿಯ ಮುಖಂಡರಾದ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಬಿಜೆಪಿ ಮುಖಂಡರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದೇನೆ. ಪಕ್ಷದ ಟಿಕೆಟ್ ಸಿಕ್ಕರೆ ಗೆಲ್ಲುವ ವಿಶ್ವಾಸವಿದೆ. ಡಾ. ಎಸ್. ಪರಮೇಶ್, ಟಿಕೆಟ್ ಆಕಾಂಕ್ಷಿ.