ಜ.15ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗಾಥಾನ್ ಕಾರ್ಯಕ್ರಮ

ಚಿತ್ರದುರ್ಗ.ಜ.೧೪; ಚಿತ್ರದುರ್ಗ ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಇದೇ ಜನವರಿ 15ರಂದು ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಅಂಗವಾಗಿ ಗಿನ್ನಿಸ್ ದಾಖಲೆಯ ಯೋಗಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸುಮಾರು 8 ಸಾವಿರ ಜನರು ಯೋಗಾಭ್ಯಾಸದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಉತ್ತಮ ರೀತಿಯಲ್ಲಿ ಆಯೋಜಿಸಲು, ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಆಚರಿಸುವ ಅಂಗವಾಗಿ ಯೋಗಾಥಾನ್ ಕಾರ್ಯಕ್ರಮ ಏರ್ಪಡಿಸುವ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಜ.15ರಂದು ಬೆಳಿಗ್ಗೆ 8 ಗಂಟೆಗೆ ಯೋಗಾಥಾನ್ ಕಾರ್ಯಕ್ರಮ ಪ್ರಾರಂಭವಾಗಲಿದ್ದು, 45 ನಿಮಿಷಗಳ ಕಾಲ ಯೋಗಾಭ್ಯಾಸ ನಡೆಯಲಿದೆ. ಹಾಗಾಗಿ ಬೆಳಿಗ್ಗೆ 7.30 ರೊಳಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಸಂಬಂಧಪಟ್ಟ ಶಿಕ್ಷಕರು, ದೈಹಿಕ ಶಿಕ್ಷಕರು ಮುಂಚಿತವಾಗಿ ಕರೆದುಕೊಂಡು ಬಂದು ನಿಗಧಿತ ಸ್ಥಳದಲ್ಲಿ  ಹಾಜರಿರಬೇಕು ಎಂದು ಸೂಚಿಸಿದರು.