ಡಾ||ಬಿ.ಆರ್.ಅಂಬೇಡ್ಕರ್ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಏ.14: ಡಾ. ಬಿ.ಆರ್. ಅಂಬೇಡ್ಕರ್‍ರವರ  ಚಿಂತನೆಗಳು, ಜೀವನಶೈಲಿ, ವೈಚಾರಿಕತೆಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಕವಿತಾ ಸಾಗರ್ ಅವರು ಹೇಳಿದರು.
ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಪೀಠ ವತಿಯಿಂದ ಆಯೋಜಿಸಿದ್ದ  ಡಾ. ಬಿ.ಆರ್. ಅಂಬೇಡ್ಕರ್‍ರವರ 132ನೇ ಜನ್ಮ ದಿನಾಚರಣೆಯ  ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಅವರು ಬಾಲ್ಯಾವಸ್ಥೆಯಲ್ಲಿ ಅನುಭವಿಸಿದ ಅಪಮಾನಕ್ಕೆ ಪ್ರತೀಕಾರವಾಗಿ ಶಿಕ್ಷಣವೇ ದಾರಿದೀಪ ಎಂಬ ಅಚಲ ವಿಶ್ವಾಸದೊಂದಿಗೆ ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸವನ್ನು ಮಾಡಿದರು. ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳಿದರು ಅವರಲ್ಲಿದ್ದ ಪುಸ್ತಕ ಪ್ರೇಮ ಅಲ್ಲಿದ್ದ ಗ್ರಂಥಾಲಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪುಸ್ತಕಗಳನ್ನು ಎರವಲು ಪಡೆದು ಓದಿದ್ದರು. ತಮ್ಮ ಮನೆಯಲ್ಲಿ ವೈಯಕ್ತಿಕ ಗ್ರಂಥಾಲಯವನ್ನು ನಿರ್ಮಿಸಿಕೊಂಡು ಅದರಲ್ಲಿ 50 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಿಸಿದ್ದರು. ಅವರು ಇಂದಿನ ಪ್ರಬಲ ಭಾರತವನ್ನು ರೂಪಿಸುವಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ.
ಅವರ ಕೆಲಸ ಮತ್ತು ಆದರ್ಶಗಳು ದೇಶದ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಕಠಿಣ ಮತ್ತು ಜಾತಿ ವ್ಯವಸ್ಥೆಯ ಸಂಕೋಲೆಯಿಂದ ಮುಕ್ತವಾದ ಸಮಾಜವನ್ನು ನಿರ್ಮಿಸಲು ಪ್ರಜಾಪ್ರಭುತ್ವದ ಅಡಿಪಾಯವಾದ ಸಂವಿಧಾನವನ್ನು ರಚಿಸಿದರು.
ಸುಮಾರು 102ಕ್ಕು ಹೆಚ್ಚು ದೇಶಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೊ. ಸಿದ್ದು ಪಿ. ಆಲಗೂರ ಮಾತನಾಡಿ ಭಾರತವು ರಾಜಕೀಯವಾಗಿ ಮಾತ್ರವಲ್ಲದೆ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿಯು ಸಹ ಸ್ವಾತಂತ್ರ್ಯ ಸಿಗಬೇಕೆಂದು ಡಾ. ಬಿ.ಆರ್. ಅಂಬೇಡ್ಕರ್‍ರವರು  ಶ್ರಮಿಸಿದರು. ವೈಯಕ್ತಿಕ ವಿಚಾರಧಾರೆಗಳನ್ನು ಒಗ್ಗಟ್ಟಾಗಿ ಚರ್ಚಿಸಿ ಉತ್ತಮ ವಿಚಾರಗಳನ್ನು  ಅಳೆದು ತೂಗಿದರೆ ಮಾತ್ರ ವಿಶ್ವವಿದ್ಯಾಲಯದ ಅಭಿವೃಧ್ದಿ, ರಾಜ್ಯದ ಏಳಿಗೆ ಮತ್ತು ರಾಷ್ಟ್ರದ ಉನ್ನತಿ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಹಿತಾಸಕ್ತಿಯನ್ನು ಬದೆಗಿಟ್ಟು ಸಭ್ಯ ಸಮಾಜದ ಒಳಿತಿಗಾಗಿ ಎಲ್ಲರು ಚಿಂತನೆ ಮಾಡಬೇಕೆಂದು ಕಿವಿಮಾತು ಹೇಳಿದರು.  ಬಾಬಾ ಸಾಹೇಬರ  ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಯಶಸ್ವಿ ವ್ಯಕ್ತಿಯಾಗಬಹುದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ಎಸ್. ಸಿ. ಪಾಟೀಲ್, ಕುಲಸಚಿವರು (ಮೌಲ್ಯಮಾಪನ) ಪ್ರೊ. ರಮೇಶ ಓ. ಓಲೇಕಾರ, ಡಾ. ಬಿ ಆರ್ ಅಂಬೇಡ್ಕರ್ ಅಧ್ಯಯನ ಪೀಠದ ಸಂಯೋಜಕರಾದ ಡಾ. ಸುಷ್ಮಾ ಎನ್. ಜೋಗನ್  ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪುಷ್ಪ ನಿರೂಪಿಸಿದರು. ಶಿಕ್ಷಣ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸುಷ್ಮಾ ಎನ್. ಜೋಗನ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ ಶಶಿಧರ ಕೆಲ್ಲೂರ್ ವಂದಿಸಿದರು. ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ, ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.