
(ಸಂಜೆವಾಣಿ ವಾರ್ತೆ)
ಬಳ್ಳಾರಿ. ಮೇ.14: ರಾಜ್ಯದ ಕೊರೆಟೆಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಪಕ್ಷದ ಹಿರಿಯ ಮುಖಂಡ ಡಾ. ಜಿ. ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಅಖಿಲ ಕರ್ನಾಟಕ ಡಾ. ಜಿ. ಪರಮೇಶ್ವರ್ ಯುವ ಸೈನ್ಯದ ಬಳ್ಳಾರಿ ಜಿಲ್ಲಾಧ್ಯಕ್ಷ ಕಪ್ಪಗಲ್ಲು ಒಂಕಾರಪ್ಪ ಕಾಂಗ್ರೆಸ್ ಪಕ್ಷದ ಹೈ ಕಮಾಂಡ್ ಗೆ ಅಗ್ರಹಿಸಿದ್ದಾರೆ.
ಡಾ.ಜಿ.ಪರಮೇಶ್ವರ್ ಅವರು ಅನೇಕ ಬಾರಿ ಶಾಸಕರಾಗಿ, ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ ಕ್ಷೇತ್ರ ಸೇರಿದಂತೆ ರಾಜ್ಯದ ವಿವಿಧ ಸಮುದಾಯದಗಳ ಜನರ ಸೇವೆ ಮಾಡಿ. ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪಕ್ಷವನ್ನು ಬಲವರ್ಧನೆ ಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಅಲ್ಲದೆ ಪಕ್ಷವನ್ನು ತಳ ಮಟ್ಟದಿಂದ ಕಟ್ಟಿ ಬೆಳಸಿದ್ದಾರೆ. 2023 ರ ವಿಧಾನಸಭೆ ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದುಕೊಳ್ಳುವಲ್ಲಿ ಪರಮೇಶ್ವರ್ ಅವರ ಪಾತ್ರವೂ ಬಹಳ ಮುಖ್ಯವಾಗಿದೆ. ಅವರು ಮುಖ್ಯಮಂತ್ರಿ ಸ್ಥಾನದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುವ ಶಕ್ತಿ ಸಾಮರ್ಥ್ಯ ಹೊಂದಿದ್ದಾರೆ. ಆದ್ದರಿಂದ ಪ್ರಸ್ತುತ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ದೊರೆತ ಹಿನ್ನೆಲೆಯಲ್ಲಿ ಡಾ ಜಿ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಆಗಿ ಘೋಷಣೆ ಮಾಡಬೇಕು. ಇದುವರೆಗೂ ಕರ್ನಾಟಕದಲ್ಲಿ ದಲಿತ ಮತಗಳನ್ನು ಆಧರಿಸಿ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಯಾವೊಬ್ಬ ಮುಖ್ಯಮಂತ್ರಿ ಸ್ಥಾನವನ್ನು ನೀಡಿಲ್ಲ. ಅಲ್ಲದೆ ಪರಮೇಶ್ವರ್ ಅವರು ಶಾಸಕರಾಗಿ,ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ, ಕಾಂಗ್ರೆಸ್ ಪಕ್ಷ ಆಡಳಿತ ಸಂದರ್ಭದಲ್ಲಿ ವಿವಿಧ ಇಲಾಖೆಯ ಸಚಿವರಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದಾರೆ. ಅಷ್ಟೇ ಅಲ್ಲದೆ ತುಮಕೂರಿನಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಬಡ ಕುಟುಂಬದದವರಿಗೆ ಶಿಕ್ಷಣ ನೀಡುವಲ್ಲಿ ನೆರವಾಗಿದ್ದಾರೆ.
ಈ ಎಲ್ಲಾ ಅಂಶಗಳನ್ನು ಆಧರಿಸಿ ಡಾ.ಜಿ. ಪರಮೇಶ್ವರ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲೇ ಬೇಕೆಂದು. ಅಖಿಲ ಕರ್ನಾಟಕ ಡಾ. ಜಿ. ಪರಮೇಶ್ವರ್ ಬಳಗ ಹಾಗೂ ವಿವಿಧ ದಲಿತ ಪರ ಸಂಘಟನೆಗಳ ಮುಖಂಡರ ಒತ್ತಾಯವಾಗಿದೆ ಎಂದಿದ್ದಾರೆ.