ಡಾ.ಬಾಬು ಜಗಜೀವನರಾಮ್ ಜಯಂತಿ ಸರಳ ಆಚರಣೆ: ಸಾಧಕರಿಗೆ ಸನ್ಮಾನ

ಧಾರವಾಡ, ಏ.5: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ ರಾಮ್ ಅವರ 114 ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುಶೀಲಾ. ಬಿ. ಅವರು ಡಾ. ಬಾಬು ಜಗಜೀವನ ರಾಮ್ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಸಾಧಕರಿಗೆ ಸನ್ಮಾನ:
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಪುಂಡಲೀಕ ದೊಡ್ಡಬಸಪ್ಪ ಮಾದರ, ಪೌರಕಾರ್ಮಿಕ ಹೂವಕ್ಕ ಹನುಮಂತ ಹಾದಿಮನಿ, ಸಮಾಜ ಸೇವಕರಾದ ಮಹೇಶ ನಿಂಗಪ್ಪ ತೊಗಲಂಗಿ, ಯಲ್ಲಪ್ಪ ಫಕೀರಪ್ಪ ಹುಲಮನಿ, ಮಹದೇವ ನಾಗಪ್ಪ ಮಾದರ ಎಸ್.ಎಸ್.ಎಲ್.ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಶ್ರೇಯಾ ಯಸಮಾಲ್, ದೀಪಿಕಾ ಚವ್ಹಾಣ, ಮಂಜುನಾಥ ಮಾದರ, ಶಾರದಾ ಸಂಗಪ್ಪ ತಳವಾರ, ತಾನಸಾ ನಾಯಕ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಈ ಸಂದರ್ಭದಲ್ಲಿ ಹಕ್ಕು ಪತ್ರ ವಿತರಿಸಲಾಯಿತು.

ಸಮಾರಂಭಕ್ಕೂ ಮುನ್ನ ನಗರದ ಆಲೂರು ವೆಂಕಟರಾವ್ ವೃತ್ತದಲ್ಲಿರುವ ಬಸವೇಶ್ವರರು ಹಾಗೂ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿಗಳಿಗೆ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೇಷ್ಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಪ್ರಭಾರ ಅಪರ ಜಿಲ್ಲಾಧಿಕಾರಿ ರುದ್ರೇಶ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎನ್.ಅರ್. ಪುರುಷೋತ್ತಮ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ಸಂಘಟನೆಗಳ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.