ಡಿಕೆಶಿ ಪ್ರಕರಣ: ಮಧ್ಯ ಪ್ರವೇಶಕ್ಕೆ ಸುಪ್ರೀಂ ನಕಾರ

ಸಿಬಿಐ ಅರ್ಜಿ ವಜಾ
(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು, ಜು. ೩೧- ಭ್ರಷ್ಟಾಚಾರ ಪ್ರಕರಣ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ವಿರುದ್ಧದ ಸಿಬಿಐ ತನಿಖೆಗೆ ಇರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್‌ನ ತಡೆಯಾಜ್ಞೆ ಆದೇಶದಲ್ಲಿ ಮಧ್ಯ ಪ್ರವೇಶಿಸಲು ನಿರಾಕರಿಸಿ, ಸಿಬಿಐ ಅರ್ಜಿಯನ್ನು ವಜಾಗೊಳಿಸಿದೆ.
ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್ ಆದೇಶದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ಸುಪ್ರಿಂಕೋರ್ಟ್ ಹೇಳಿದೆ. ಹೀಗಾಗಿ ಸಿಬಿಐ ತನಿಖೆಗೆ ತಡೆಯಾಜ್ಞೆ ಮುಂದುವರೆಯಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿಬಿಐ ತನಿಖೆ ಎದುರಿಸುವುದರಿಂದ ಸದ್ಯಕ್ಕೆ ಪಾರಾಗಿದ್ದಾರೆ.
ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಸಂಬಂಧ ಸಿಬಿಐ ಡಿ.ಕೆ. ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆಗೆ ಮುಂದಾಗಿದ್ದು, ಇದನ್ನು ಪ್ರಶ್ಸಿಸಿ ಡಿ.ಕೆ. ಶಿವಕುಮಾರ್ ರಾಜ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿತ್ತು. ವಿರುದ್ಧ ಮೇಲ್ಮನವಿ ಸಲ್ಲಿಸಿದ್ದ ಡಿ.ಕೆ. ಶಿವಕುಮಾರ್ ಅರ್ಜಿಯನ್ನು ಪುರಸ್ಕರಿಸಿ ರಾಜ್ಯ ಹೈಕೋರ್ಟ್ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು.
ಜುಲೈ ೧೭ ರಂದು ತಡೆಯಾಜ್ಞೆ ನೀಡಿದ್ದ ನ್ಯಾಯಾಲಯ ಅದನ್ನು ಮೂರು ವಾರಗಳ ಕಾಲ ವಿಸ್ತರಣೆ ಮಾಡಿತ್ತು .ಇದು ಆದಾಯ ತೆರಿಗೆ ಕಾನೂನುಗಳ ಪ್ರಕಾರ ದಾಖಲಿಸಿರುವ ವಿಶೇಷ ಕ್ರಿಮಿನಲ್ ಪ್ರಕರಣ ಎಂಬ ಸಿಬಿಐ ವಾದವನ್ನು ಎತ್ತಿ ಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ರಾಜ್ಯ ಹೈಕೋರ್ಟ್‌ನ ವಿಭಾಗೀಯ ಪೀಠ ವಜಾ ಮಾಡಿ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡಿತ್ತು.ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡಿದ್ದ ರಾಜ್ಯ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ತಡೆಯಾಜ್ಞೆಯನ್ನು ತೆರವುಗೊಳಿಸುವುಂತೆ ಕೋರಿತ್ತು.ಸಿಬಿಐ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಹೈಕೋರ್ಟ್ ನೀಡಿರುವ ಮಧ್ಯಂತರ ತಡೆಯನ್ನು ರದ್ದು ಮಾಡಲು ನಿರಾಕರಿಸಿ ಆ ವಿಚಾರದಲ್ಲಿ ಮಧ್ಯ ಪ್ರವೇಶಿಸಲ್ಲ ಎಂದು ಹೇಳಿದೆ.ಸುಪ್ರೀಂಕೋರ್ಟ್‌ನ ಈ ಆದೇಶ ಡಿ.ಕೆ ಶಿವಕುಮಾರ್ ರವರಿಗೆ ನಿರಾಳೆತೆ ತಂದು ಕೊಟ್ಟಿದೆ.