ಡಿಕೆಶಿ ವಿರುದ್ಧ ಪ್ರಕರಣ ರದ್ದುಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ, ಸೆ.19- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ ಇಂದು ಸುಪ್ರೀಂಕೋರ್ಟ್ ತಡೆ ನೀಡಿದೆ.
ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಿಚಾರಣೆ ಎದುರಿಸುತ್ತಿರುವ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ತಡೆ ನೀಡಿದೆ.
2018ರಲ್ಲಿ ಡಿಕೆ ಶಿವಕುಮಾರ್ ಬಳಿ ಐಟಿ ದಾಖಲೆ ವಶಪಡಿಸಿಕೊಳ್ಳಲಾಗಿತ್ತು. ಈಗಲ್‌ಟನ್ ರೆಸಾರ್ಟ್‌ನಲ್ಲಿ ಐಟಿ ಅಧಿಕಾರಿಗಳಿಂದ ಜಪ್ತಿ ಮಾಡಲಾಗಿತ್ತು.

ಡಿಕೆ ಶಿವಕುಮಾರ್ ಇದ್ದ ಕೊಠಡಿಯಲ್ಲಿ ಹಣಕಾಸು ವರ್ಗಾವಣೆ ದಾಖಲೆ ವಶಪಡಿಸಿಕೊಳ್ಳಲಾಗಿತ್ತು. ಆದರೆ ಐಟಿ ತನಿಖೆಗೆ ಹೈಕೋರ್ಟ್‌ ತಡೆ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿತ್ತು.

ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ನೋಟಿಸ್‌ ಜಾರಿ ಮಾಡಿದೆ. 4 ವಾರದ ಒಳಗಡೆ ಹೊಸ ಅರ್ಜಿ ಸಲ್ಲಿಸುವಙತೆ ಆದಾಯ ತೆರಿಗೆ ಇಲಾಖೆಗೆ ಸುಪ್ರೀಂಕೋರ್ಟ್ ಸೂಚಿಸಿದೆ.

2017ರ ಆಗಸ್ಟ್ 2ರಂದು ಡಿಕೆ ಶಿವಕುಮಾರ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಸಂದರ್ಭದಲ್ಲಿ ಈಗಲ್ಟನ್‌ ರೆಸಾರ್ಟ್‌ನಲ್ಲಿ ಗುಜರಾತಿನ 44 ಮಂದಿ ಕಾಂಗ್ರೆಸ್‌ ಶಾಸಕರ ಯೋಗಕ್ಷೇಮದ ಉಸ್ತುವಾರಿಯನ್ನು ಡಿ.ಕೆ. ಶಿವಕುಮಾರ್‌ ನೋಡಿಕೊಳ್ಳುತ್ತಿದ್ದರು. ಈ ಮಾಹಿತಿ ತಿಳಿದ ಅಧಿಕಾರಿಗಳು ಅಲ್ಲಿಯೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದನ್ನು ಉಲ್ಲೇಖಿಸಬಹುದು.