ಡಿ.ಕೆ. ಶಿವಕುಮಾರ್ ಗೂ ಮುಖ್ಯಮಂತ್ರಿ ಯೋಗ: ಕೋಡಿಮಠದ ಶ್ರೀ ಭವಿಷ್ಯ

ಕೆ.ಆರ್.ಪೇಟೆ. ಮೇ.22:- ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವು ಜನತೆಯ ಭಾವನೆಗಳಿಗೆ ಪೂರಕವಾಗಿ ಸ್ಪಂದಿಸಿ ಕೆಲಸ ಮಾಡುವ ಮೂಲಕ ಜನಾದೇಶದ ತೀರ್ಪಿಗೆ ಅನುಗುಣವಾಗಿ 5 ವರ್ಷಗಳನ್ನು ಪೂರ್ಣಗೊಳಿಸಲಿದೆ ಎಂದು ಅರಸೀಕೆರೆಯ ಹಾರನಹಳ್ಳಿ ಕೋಡಿಮಠದ ಪೀಠಾಧಿಪತಿ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.
ಅವರು ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದ ಖಾಸಗಿ ಕಾರ್ಯಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೋಡಿಮಠ ಶ್ರೀಗಳು, ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ಕೂಡ ಮುಖ್ಯಮಂತ್ರಿಯಾಗುವ ಯೋಗವಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯಲು ಡಿ.ಕೆ.ಶಿವಕುಮಾರ್ ಕೊಡುಗೆಯೂ ಅಪಾರವಾಗಿದೆ. ಮಂತ್ರಿ ಮಂಡಲ ವಿಸ್ತರಣೆಯಲ್ಲಿ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡದೇ ಪ್ರಾದೇಶಿಕವಾರು, ಜಿಲ್ಲಾವಾರು ಸೂಕ್ತ ಪ್ರಾತಿನಿಧ್ಯ ನೀಡಿ ಸಂಪುಟ ವಿಸ್ತರಣೆ ಮಾಡಬೇಕು ಎಂದು ಕೋಡಿಮಠ ಶ್ರೀ ಸಲಹೆ ನೀಡಿದರು.
ಸಿಎಂ ಆಗ್ತೀರಿ ಎಂದು ಸಿದ್ದರಾಮಯ್ಯಗೆ ಹೇಳಿದ್ದೆ
ಅರಸೀಕರೆಗೆ ಪ್ರಚಾರಕ್ಕೆ ಆಗಮಿಸಿದ್ದ ಸಿದ್ಧರಾಮಯ್ಯ ಅವರಿಗೆ ಮತ್ತೊಮ್ಮೆ ನಿಮಗೆ ಮುಖ್ಯಮಂತ್ರಿಯಾಗುವ ಯೋಗವಿದೆ ಎಂದು ಹೇಳಿದ್ದೆ. ಅದು ನಿಜವಾಗಿದೆಯಲ್ಲದೇ, ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಯಾರದೇ ಹಂಗಿಲ್ಲದೇ, ಸ್ವತಂತ್ರವಾಗಿ ಅಧಿಕಾರ ಹಿಡಿಯಲಿದೆ ಎಂದು ಭವಿಷ್ಯ ನುಡಿದಿದ್ದೆ ಎಂದು ಕೋಡಿಮಠ ಶ್ರೀಗಳು ತಿಳಿಸಿದರು.
ಲೋಕಸಭೆ ಚುನಾವಣೆ ನಂತರ ಕಂಟಕ
ಸದ್ಯಕ್ಕೆ ರಾಜ್ಯ ಸರ್ಕಾರಕ್ಕೆ ಯಾವುದೇ ಕಂಟಕವಿಲ್ಲ. ಲೋಕಸಭಾ ಚುನಾವಣೆಯ ನಂತರ ಸಣ್ಣ ಕಂಟಕ ಉಂಟಾಗಲಿದೆ. ಅದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಕೋಡಿ ಶ್ರೀಗಳು ತಿಳಿಸಿದ್ದಾರೆ.