ಡಿ. ೧೯: ಬೃಹತ್ ಲೋಕ್ ಅದಾಲತ್

ತುಮಕೂರು, ನ. ೨೧- ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳ ಸಹಯೋಗದಲ್ಲಿ ಡಿಸೆಂಬರ್ ೧೯ ರಂದು ?ಬೃಹತ್ ಲೋಕ್ ಅದಾಲತ್? (ಜನತಾ ನ್ಯಾಯಾಲಯ)ನ್ನು ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಎಸ್.ಸಂಗ್ರೇಶಿ ತಿಳಿಸಿದರು.
ಇಲ್ಲಿನ ನ್ಯಾಯಾಲಯದ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬೃಹತ್ ಲೋಕ್ ಅದಾಲತ್ ಮೂಲಕ ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ, ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಅತೀ ಶೀಘ್ರವಾಗಿ ಇತ್ಯರ್ಥಗೊಳಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಪ್ರತಿದಿನ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬೃಹತ್ ಲೋಕ್ ಅದಾಲತ್‌ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‌ಗಳನ್ನು ನಡೆಸಲಾಗುತ್ತಿದ್ದು, ಸಾರ್ವಜನಿಕರು ಈ ಅದಾಲತ್‌ನ ಸದುಪಯೋಗ ಪಡೆಯಬೇಕು ಎಂದು ಮನವಿ ಮಾಡಿದರು.
ಸರ್ವರಿಗೂ ನ್ಯಾಯ ಎಂಬುದು ಭಾರತದ ಕಾನೂನು ಸೇವೆಗಳ ಧ್ಯೇಯವಾಗಿದೆ. ಯಾವೊಬ್ಬ ಪ್ರಜೆಯು ತನ್ನ ಆರ್ಥಿಕ ಅಥವಾ ಇತರೆ ದೌರ್ಬಲ್ಯಗಳ ಕಾರಣಗಳಿಂದಾಗಿ ನ್ಯಾಯ ಪಡೆಯುವುದರಿಂದ ವಂಚಿತನಾಗಬಾರದೆಂದು ಉಚಿತ ಮತ್ತು ಸಕ್ಷಮ ಕಾನೂನು ಸೇವೆಗಳನ್ನು ಸಮಾಜದ ದುರ್ಬಲ ವರ್ಗಗಳಿಗೆ ಒದಗಿಸುವ ಸಲುವಾಗಿ ಜನತಾ ನ್ಯಾಯಾಲಯಗಳನ್ನು ವ್ಯವಸ್ಥೆಗೊಳಿಸಲು ಹಾಗೂ ಸಮಾನ ಅವಕಾಶಗಳ ಆಧಾರದ ಮೇಲೆ ನ್ಯಾಯಾಂಗ ವ್ಯವಸ್ಥೆ ಕಾರ್ಯ ನಿರ್ವಹಿಸಿ ನ್ಯಾಯ ಒದಗಿಸುವ ಉದ್ದೇಶದಿಂದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸ್ಥಾಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅದಾಲತ್‌ಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ನಡೆಸಲಾಗುತ್ತಿದೆ ಎಂದರು.
ಜನಸಾಮಾನ್ಯರಿಗೆ ಅತೀ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಿ ನ್ಯಾಯ ದೊರಕಿಸುವುದು ಈ ಜನತಾ ನ್ಯಾಯಾಲಯದ ಉದ್ದೇಶವಾಗಿದೆ. ಡಿಸೆಂಬರ್ ೧೯ರಂದು ಹಮ್ಮಿಕೊಂಡಿರುವ ಸದರಿ ಬೃಹತ್ ಲೋಕ್ ಅದಾಲತ್‌ನಲ್ಲಿ ಎಲ್ಲಾ ರೀತಿಯ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಈ ಜನತಾ ನ್ಯಾಯಾಲಯವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿಗಳು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದರು.
ಅದಾಲತ್‌ನಲ್ಲಿ ವ್ಯಾಜ್ಯಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ ಸೇರಿದಂತೆ ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ (ಇxಛಿಟuಜiಟಿg ಟಿoಟಿ-ಛಿomಠಿouಟಿಜಚಿbಟe)ಗಳು, ಇತರೆ ಪ್ರಕರಣ(ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಹಾಗೂ ಇತರೆ ಸಿವಿಲ್ ಪ್ರಕರಣ)ಗಳನ್ನು ಇತ್ಯರ್ಥಪಡಿಸಲಾಗುವುದು. ಅಲ್ಲದೆ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜೀಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯ, ಬ್ಯಾಂಕ್, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ((ಓoಟಿ ಅomಠಿouಟಿಜಚಿbಟe ಹೊರತುಪಡಿಸಿ)ಗಳು, ವೈವಾಹಿಕ, ಕುಟುಂಬ ನ್ಯಾಯಾಲಯ ಪ್ರಕರಣ(ವಿಚ್ಛೇದನ ಪ್ರಕರಣ ಹೊರತುಪಡಿಸಿ), ಭೂಸ್ವಾಧೀನ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣ(ಜಿಲ್ಲಾ ಹಾಗೂ ಉಚ್ಚ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ್ರ)ಗಳು, ಸಿವಿಲ್ ಪ್ರಕರಣ(ಬಾಡಿಗೆ, ಅನುಭೋಗದ ಹಕ್ಕುಗಳು ನಿರ್ಬಂಧಕಾಜ್ಞೆ ದಾವೆಗಳು ಹಾಗೂ ಇತರೆ ದಾವೆಗಳು)ಗಳನ್ನು ರಾಜಿ ಮೂಲಕ ಬಗೆಹರಿಸಲಾಗುವುದು.
ಜನಸಾಮಾನ್ಯರು ಈ ಜನತಾ ನ್ಯಾಯಾಲಯದ ಮೂಲಕ ಶೀಘ್ರವಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಹಾಗೂ ಈ ಜನತಾ ನ್ಯಾಯಾಲಯದಲ್ಲಿ ನೇರವಾಗಿ ಅಥವಾ ವಕೀಲರ ಮುಖಾಂತರ ಭಾಗವಹಿಸಲು ಅವಕಾಶವಿದ್ದು, ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯ ಉಳಿದು ವಿವಾದ ಸುಖಾಂತ್ಯಗೊಳ್ಳುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣ(ವ್ಯಾಜ್ಯ ಪೂರ್ವ ಪ್ರಕರಣಗಳು)ಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದಾಗಿದೆ. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಪ್ರತಿದಿನ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ಲೋಕ್ ಅದಾಲತ್‌ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‌ಗಳನ್ನು ನಡೆಸಲಾಗುತ್ತಿದೆಯಲ್ಲದೆ ಕೋವಿಡ್-೧೯ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಜೀ ಮಾತುಕತೆಯನ್ನು ಎಲೆಕ್ಟ್ರಾನಿಕ್ ವಿಧಾನಗಳ ಮೂಲಕವೂ ಮಾಡಲಾಗುತ್ತಿದ್ದು, ನೇರವಾಗಿ ಅದಾಲತ್‌ಗೆ ಆಗಮಿಸಲು ಸಾಧ್ಯವಿಲ್ಲದವರು ವಿಡಿಯೋ ಕಾಲ್ ಮೂಲಕವೂ ರಾಜಿ ಸಂಧಾನ ಮಾಡಿಕೊಂಡು ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.
ಕಳೆದ ಬಾರಿ ಸೆಪ್ಟೆಂಬರ್ ೧೯ರಂದು ನಡೆದ ಲೋಕ್ ಅದಾಲತ್‌ನಲ್ಲಿ ನೇರವಾಗಿ ಅಲ್ಲದೆ ವಿಡಿಯೋ ಕಾನ್ಫರೆನ್ಸ್, ವಿಡಿಯೋ ಕಾಲ್ ನಂತರ ಸಾಮಾಜಿಕ ಜಾಲತಾಣದ ಮೂಲಕ ನ್ಯಾಯಾಲಯದಲ್ಲಿ ಬಾಕಿ ಇದ್ದ ೫೪೭೪ ಪ್ರಕರಣಗಳನ್ನು ರಾಜೀ ಮೂಲಕ ಬಗೆಹರಿಸಲಾಗಿದೆ.
ಅಲ್ಲದೆ ಕಳೆದ ಅಕ್ಟೋಬರ್ ೩೧ರವರೆಗೂ ಜಿಲ್ಲೆಯಲ್ಲಿ ಕ್ರಿಮಿನಲ್ ಮತ್ತು ಸಿವಿಲ್ ಸೇರಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಒಟ್ಟು ೭೭೮೪೭ ಪ್ರಕರಣಗಳ ಪೈಕಿ ೫೬೯೪ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಈ ಬೃಹತ್ ಲೋಕ್ ಅದಾಲತ್‌ನಲ್ಲಿ ಬಗೆಹರಿಸುವ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರ ಕಾರ್ಯಗತವಾಗಿದೆ. ಅದಾಲತ್‌ನಲ್ಲಿ ತ್ವರಿತವಾಗಿ ಪ್ರಕರಣ ಇತ್ಯರ್ಥವಾಗುವುದಲ್ಲದೆ, ಇತ್ಯರ್ಥವಾದ ಮೊಕದ್ದಮೆಗಳ ವಿರುದ್ಧ ಅಪೀಲು ಹೋಗಲು ಸಾಧ್ಯವಿಲ್ಲದಿರುವುದರಿಂದ ಜನರಿಗೆ ಲೋಕ್ ಅದಾಲತ್‌ಗಳ ಬಗ್ಗೆ ಇನ್ನಷ್ಟು ವಿಶ್ವಾಸ ಮೂಡುತ್ತಿರುವುದು ಸಂತಸ ತಂದಿದೆ. ಅದಾಲತ್‌ಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕು,ಹೋಬಳಿ ಮಟ್ಟದಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಮೊಕದ್ದಮೆಗಳನ್ನು ಹೊರತುಪಡಿಸಿ ಉಳಿದ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲು ಆಯಾ ತಾಲ್ಲೂಕು ನ್ಯಾಯಾಲಯಗಳಿಗೆ ಸೂಚಿಸಲಾಗಿದೆ ಎಂದರು.
ಜಿಲ್ಲಾಧಿಕಾರಿಗಳ ಕಚೇರಿ ಬಳಿಯಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಭವಿಸುತ್ತಿದ್ದು, ಅಪಘಾತಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಪತ್ರಕರ್ತರು ಮನವಿ ಮಾಡಿದಾಗ ನ್ಯಾಯಾಧೀಶರು ಈಗಾಗಲೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿರುವ ಜೈಲಿನಲ್ಲಿ ಅಕ್ರಮಗಳು ನಡೆಯುವ ಬಗ್ಗೆ ದೂರುಗಳು ಬಂದಲ್ಲಿ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಪ್ರತಿ ಮಾಹೆಯಲ್ಲಿ ಬಂಧಿಖಾನೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜೆ.ಕೆ.ಅನಿಲ್ ಮತ್ತಿತರರು ಉಪಸ್ಥಿತರಿದ್ದರು.