ಡಿ.2ರಂದು ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ

ಕಲಬುರಗಿ,ನ.29: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಹಾಗೂ ಬೀದರ್ ನಗರದ ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ ಭಾಲ್ಕಿಯ ಬಿ.ಕೆ.ಐ.ಟಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಡಿ.2ರಂದು ಬೆಳಗ್ಗೆ 11.30ಕ್ಕೆ ಶರಣ ಡಾ.ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಹಾಸಭಾ ಜಿಲ್ಲಾ ಉಪಾಧ್ಯಕ್ಷೆ ಗೌರಿ ಚಿಚಕೋಟಿ ಹಾಗೂ ಡಾ.ಸುಧಾ ಹಾಲಕಾಯಿ ತಿಳಿಸಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಭೀಮಣ್ಣ ಖಂಡ್ರೆಯವರ ಜನ್ಮ ಶತಮಾನೋತ್ಸವ ಪ್ರಯುಕ್ತ ಖ್ಯಾತ ಸಾಹಿತಿ ಡಾ.ಗೊ.ರು.ಚನ್ನಬಸಪ್ಪ ಅವರ ಪ್ರಧಾನ ಸಂಪಾದಕತ್ವದಲ್ಲಿ ಸಿದ್ದಪಡಿಸಲಾಗಿರುವ 860 ಪುಟಗಳ ಲೋಕನಾಯಕ ಅಭಿನಂದನಾ ಕೃತಿ ಲೋಕಾರ್ಪಣೆ ಆಗಲಿದೆ ಎಂದು ಮಾಹಿತಿ ನೀಡಿದರು.
ನಾಡಿನ ವಿವಿಧ ಮಠಗಳ ಹರ-ಗುರು-ಚರಮೂರ್ತಿಗಳು ಸಾನ್ನಿಧ್ಯ ವಹಿಸಲಿರುವ ಈ ಅಭಿನಂದನಾ ಸಮಾರಂಭವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನಾ ಗ್ರಂಥ ಬಿಡುಗಡೆ ಮಾಡಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾಕ್ಷ್ಯಚಿತ್ರ ಬಿಡುಗಡೆ ಮಾಡಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಈ ಸಮಾರಂಭದಲ್ಲಿ ಪಾಲ್ಗೊಳ್ಳಬೇಕೆಂದು ಅವರು ಮನವಿ ಮಾಡಿದರು.