ಡೆಂಘೀ ನಿರ್ಮೂಲನಾ ದಿನಾಚರಣೆ ಸಮನ್ವ ಸಮಿತಿ ಸಭೆ

ಕೋಲಾರ,ಮೇ೧೯-ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಮಳೆ ನೀರು ಶೇಖರಣೆಯಿಂದ ಉಂಟಾಗಬಹುದಾದ ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸಬೇಕಾಗಿದೆ. ಇದರಿಂದ ತೀವ್ರತರವಾದ ಪರಿಣಾಮವುಳ್ಳ ಡೆಂಗಿ ಮತ್ತು ಚಿಕೂನ್‌ಗುನ್ಯನಂತಹ ಖಾಯಿಲೆಗಳನ್ನು ತಡೆಗಟ್ಟಬಹುದು ಮತ್ತು ಇಂತಹ ರೋಗಗಳು ಸಾರ್ವಜನಿಕ ವಲಯದಲ್ಲಿ ಹರಡದಂತೆ ನಿಯಂತ್ರಣ ಸಾಧಿಸಬಹುದು ಎಂದು ಜಿಲ್ಲಾಧಿಕಾರಿ ವೆಂಕಟ್‌ರಾಜಾ ತಿಳಿಸಿದರು.
ನಗರ ಹೊರವಲಯದ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಡೆಂಗಿ ನಿಯಂತ್ರಣ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ಅಂತರ ಇಲಾಖಾ ಸಮನ್ವಯ ಸಮಿತಿ ಸ|ಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರು ತಮ್ಮ ಜವಾಬ್ದಾರಿಯನ್ನು ಅರಿತು ರೋಗದಿಂದ ದೂರವಿರಬೇಕು. ಹಾಗೂ ರೋಗ ಪ್ರಸರಣವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಮನೆಯಲ್ಲಿ ಇರುವ ನೀರಿನ ತೊಟ್ಟಿಗಳು, ಡ್ರಂಗಳು, ಬ್ಯಾರೆಲ್‌ಗಳು ಮತ್ತು ಸಿಂಟೆಕ್ಸ್‌ಗಳನ್ನು ಕನಿಷ್ಠ ವಾರಕ್ಕೆ ಒಂದು ಬಾರಿ ಸ್ವಚ್ಛಗೊಳಿಸಬೇಕು ಹಾಗೂ ಭದ್ರವಾಗಿ ಮುಚ್ಚಿಡಬೇಕು. ಮನೆಯ ಸುತ್ತಮುತ್ತ ಮಳೆ ನೀರು ಸಂಗ್ರಹವಾಗುವ ಟೈರ್‌ಗಳು, ತೆಂಗಿನ ಚಿಪ್ಪುಗಳು, ಮುಂತಾದವುಗಳನ್ನು ನೀರು ಸಂಗ್ರಹವಾಗದಂತೆ ಸೂಕ್ತವಾಗಿ ವಿಲೇರವಾರಿ ಮಾಡಬೇಕು. ಹಗಲಿನಲ್ಲಿ ವಿಶ್ರಾಂತಿ ಪಡೆಯುವವರು, ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ಗರ್ಭಿಣಿಯರು ಸೊಳ್ಳೆ ನಿರೋಧಕಗಳು ಹಾಗೂ ಸೊಳ್ಳೆ ಪರದೆಯನ್ನು ತಪ್ಪದೇ ಬಳಸಬೇಕು ಎಂದು ತಿಳಿಸಿದರು.
ಶಾಲೆಯ ಸುತ್ತಮುತ್ತ ಸ್ವಚ್ಚತೆಯನ್ನು ಕಾಪಾಡುವುದು ಹಾಗೂ ಶಾಲಾ ಮಕ್ಕಳಿಗೆ ಲಾರ್ವಾ ಪ್ರಾತ್ಯಕ್ಷಿಕೆ ಮತ್ತು ಆರೋಗ್ಯ ಶಿಕ್ಷಣ ನೀಡುವ ಮೂಲಕ ಜಾಗೃತಿಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಹಾಸ್ಟಲ್ ಆವರಣದಲ್ಲಿ ಪರಿಸರ ನೈರ್ಮಲ್ಯ ಕಾಪಾಡುವುದು ಹಾಗೂ ಇಲಾಖೆಯ ವ್ಯಾಪ್ತಿಗೊಳಪಡುವ ಎಲ್ಲಾ ವಸತಿ ನಿಲಯಗಳಲ್ಲಿ ಟ್ಯಾಂಕ್, ಸಂಪುಗಳನ್ನು ಭದ್ರವಾಗಿ ಮುಚ್ಚುವುದು ಮತ್ತು ಕಾಲ ಕಾಲಕ್ಕೆ ಸ್ವಚ್ಛಗೊಳಿಸಬೇಕು ಎಂದು ತಿಳಿಸಿದರು.
ಕಲ್ಲು ಗಣಿಗಾರಿಕೆ ಕೆಲಸಕ್ಕೆ ವಿವಿಧ ರಾಜ್ಯ ಮತ್ತು ಜಿಲ್ಲೆಗಳಿಂದ ವಲಸೆ ಬಂದಿರುವ ಕೂಲಿ ಕಾರ್ಮಿಕರ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ನೀಡುವುದು. ಅವರಲ್ಲಿ ಜ್ವರ ಪ್ರಕರಣಗಳು ಕಂಡುಬಂದಾಗ ಸಂಬಂಧಪಟ್ಟ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡುವುದು,. ಕಾರ್ಮಿಕರಿಗೆ ಸ್ವಯಂ ರಕ್ಷಣೆಗೆ ಸೊಳ್ಳೆ ಪರದೆಗಳನ್ನು ನೀಡುವುದು ಮತ್ತು ಅವರ ವಾಸಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದರು.
ಸಾರ್ವಜನಿಕರು ತೀವ್ರ ಜ್ವರ, ಮೈಕೈ ನೋವು ಮತ್ತು ಕೀಲುನೋವು, ತೀವ್ರತರವಾದ ತಲೆನೋವು, ಹೆಚ್ಚಾಗಿ ಹಣೆಮುಂಭಾಗ, ಕಣ್ಣಿನ ಹಿಂಭಾಗದ ನೋವು, ವಾಕರಿಕೆ ಮತ್ತು ವಾಂತಿ, ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಹಾಗೂ ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ವಸಡುಗಳಿಂದ ರಕ್ತಸ್ರಾವವಾಗುವ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ ಎಂದು ಸಾರ್ವಜನಿಕರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಡೆಂಗೀ ನಿಯಂತ್ರಣ ದಿನ ಕುರಿತ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಪ್ರೊಬೆಷನರಿ ಐ.ಎ.ಎಸ್. ಅಧಿಕಾರಿ ವಿನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಜಗದೀಶ್, ಎಸ್.ಎನ್.ಆರ್. ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ವಿಜಯಕುಮಾರ್, ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ ಪ್ರಸನ್ನಕುಮಾರ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ವಿಜಯಕುಮಾರಿ, ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ಚಾರಿಣಿ, ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪ್ರೇಮ, ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.