ತಂಬಾಕು ಕಾರ್ಯಾಚರಣೆ ಪರಿಣಾಮಕಾರಿಯಾಗಿ ಅನುಷ್ಠಾನವಾಗಲಿ

 

ಚಿತ್ರದುರ್ಗ. ಸೆ.೧೫; ತಹಶೀಲ್ದಾರ್ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ನೇತೃತ್ವದ ತಾಲ್ಲೂಕು ಮಟ್ಟದ ತಂಬಾಕು ತನಿಖಾ ತಂಡವು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಂಬಾಕು ದಾಳಿ ನಡೆಸಿ, ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ತಂಬಾಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್, ತಾಲ್ಲೂಕು ಆರೋಗ್ಯಾಧಿಕಾರಿ, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ, ಕಾಲೇಜು ಆವರಣ ಮತ್ತು ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು. ತಾಲ್ಲೂಕು ಮಟ್ಟದಲ್ಲಿ ತಂಬಾಕು ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಿ. ಶಾಲಾ, ಕಾಲೇಜುಗಳ ಆವರಣದಿಂದ 100 ಮೀಟರ್ ಒಳಗೆ ತಂಬಾಕು ಮಾರುವ ಅಂಗಡಿಗಳ ಮೇಲೆ ದಾಳಿ ನಡೆಸಿ 6ಬಿ ಅಡಿಯಲ್ಲಿ ಹೆಚ್ಚು ಪ್ರಕರಣಗಳನ್ನು ದಾಖಲಿಸಬೇಕು ಎಂದು ಸೂಚಿಸಿದರು.ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ. ಪ್ರಭುದೇವ್ ಮಾತನಾಡಿ, ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಡಿಜಿಟಲ್ ಬೋರ್ಡ್‍ಗಳಲ್ಲಿ ತಂಬಾಕು ನಿಯಂತ್ರಣ ಕುರಿತು ಜಾಗೃತಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಾಡಲಾಗಿದೆ. ರೈತರಿಗೆ ತಂಬಾಕು ನಿಯಂತ್ರಣ ಕುರಿತು ತರಬೇತಿಯನ್ನು ಕೃಷಿ ಇಲಾಖೆ ಸಹಯೋಗದೊಂದಿಗೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಗೋಡೆಗಳ ಮೇಲೆ ತಂಬಾಕು ಮುಕ್ತ ಪ್ರದೇಶ ಎಂದು ಬರೆಸುವ ಮೂಲಕ ಅರಿವು ಮೂಡಿಸಲಾಗಿದೆ ಎಂದು ತಿಳಿಸಿದರು.ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯಲ್ಲಿರುವ ಎಲ್ಲಾ ಪ್ರವಾಸಿ ತಾಣಗಳಲ್ಲಿ ತಂಬಾಕಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಗೋಡೆ ಬರಹ ಹಾಗೂ ಚಿತ್ರಗಳ ಮೂಲಕ ಜಾಗೃತಿ ಮೂಡಿಸಿ, ತಂಬಾಕು ಮುಕ್ತ ಪ್ರವಾಸಿ ತಾಣಗಳೆಂದು ಘೋಷಿಸಲಾಗಿದೆ. ನ್ಯಾಯಬೆಲೆ ಅಂಗಡಿಗಳ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಗೋಡೆ ಬರಹದ ಮೂಲಕ ಸೆಕ್ಷನ್ 4 ಕಾಯ್ದೆಯ ಬಗ್ಗೆ  ತಿಳಿಸಲಾಗಿದೆ ಎಂದರು.
ಜೂನ್‍ನಿಂದ ಆಗಸ್ಟ್‍ವರೆಗೂ ಜಿಲ್ಲೆಯಲ್ಲಿ ಒಟ್ಟು 22 ಶಾಲಾ,ಕಾಲೇಜುಗಳನ್ನು ತಂಬಾಕು ಮುಕ್ತ ಶಾಲೆ, ಕಾಲೇಜುಗಳೆಂದು ಘೋಷಿಸಲಾಗಿದೆ. ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆಗಳಲ್ಲಿ ತಾಲ್ಲೂಕು ಮಟ್ಟದ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಸಭೆಗಳನ್ನು ಮಾಡಲಾಗಿದೆ. ಹಿರಿಯೂರು ಮತ್ತು ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಸಭೆಗಳು ಆಗಬೇಕಿದೆ ಎಂದು ತಿಳಿಸಿದರು.ತಂಬಾಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ 298 ಪ್ರಕರಣಗಳು ದಾಖಲಿಸಿ ರೂ.28,250/- ದಂಡ ವಿಧಿಸಲಾಗಿದೆ ಹಾಗೂ ಅಬಕಾರಿ ಇಲಾಖೆಯಿಂದ 35 ಪ್ರಕರಣ ದಾಖಲಿಸಿ ರೂ.7000/- ದಂಡ ವಿಧಿಸಿದೆ. ಪೊಲೀಸ್ ಹಾಗೂ ಅಬಕಾರಿ ಇಲಾಖೆಯಿಂದ ಒಟ್ಟು 333 ಕೇಸ್‍ಗಳನ್ನು ದಾಖಲಿಸಿ ರೂ. 35,250/- ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದರು.ಸಭೆಯಲ್ಲಿ ರಾಜ್ಯ ತಂಬಾಕು ನಿಯಂತ್ರಣ ಕೋಶದ ವಿಭಾಗೀಯ ಸಂಯೋಜಕರಾದ ಜಯಲ್ ಥಾಮಸ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕಾಶಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಮತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಮಾಜ ಸೇವಕ ಕೆ.ಎಂ.ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.