ತಂಬಾಕು ದುಷ್ಪರಿಣಾಮ ಜಾಗೃತಿಗೆ ಗುಲಾಬಿ ಆಂದೋಲನ


ಧಾರವಾಡ, ನ.19: ತಂಬಾಕು ಮತ್ತು ಅದರ ಉತ್ಪನ್ನಗಳ ಸೇವಿಸುವಿಕೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ತಂಬಾಕು ಮಾರಾಟಗಾರರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ವ್ಯಕ್ತಿಗಳಿಗೆ ಗುಲಾಬಿ ಹೂವುಗಳನ್ನು ನೀಡಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಜರುಗಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪ್ರಜೆಂಟೇಶನ್ ಆಂಗ್ಲ ಮಾಧ್ಯಮ ಬಾಲಕಿಯರ ಪ್ರೌಢಶಾಲೆ ಸಹಯೋಗದಲ್ಲಿ ಈ ಆಂದೋಲನ ಹಮ್ಮಿಕೊಳ್ಳಲಾಗಿತ್ತು.
ಪ್ರೀತಿ ಮತ್ತು ಗೌರವದ ಸಂಕೇತವಾಗಿರುವ ಗುಲಾಬಿ ಹೂವುಗಳನ್ನು ತಂಬಾಕು ಮಾರಾಟಗಾರರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ವ್ಯಕ್ತಿಗಳಿಗೆ ನೀಡಿ ಅದರ ದುಷ್ಪರಿಣಾಮಗಳನ್ನು ವಿವರಿಸಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಶವಂತ ಮದೀನಕರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನಕುಮಾರ ಹಂಚಾಟೆ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸುಜಾತಾ ಹಸವೀಮಠ, ತಾಲೂಕಾ ಆರೋಗ್ಯಾಧಿಕಾರಿ ಡಾ.ತನುಜಾ ಕೆ.ಎನ್., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್. ಪಾತ್ರೋಟ, ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ್ ಪದಕಿ ಸೇರಿದಂತೆ ಪ್ರಜೆಂಟೆಷನ್ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಆಂದೋಲನದಲ್ಲಿ ಭಾಗವಹಿಸಿದ್ದರು.