ತಪ್ಪದೇ ಮತದಾನದ ಹಕ್ಕು ಚಲಾಯಿಸಲು ಕರೆ

ಬ್ಯಾಡಗಿ,ಏ13 : ಚುನಾವಣೆಯಲ್ಲಿ ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತಾಗಬೇಕು ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ. ಮಲ್ಲಿಕಾರ್ಜುನ ಕರೆ ನೀಡಿದರು.
ತಾಲೂಕಿನ ಕಾಗಿನೆಲೆ ಗ್ರಾಮದ ಚನ್ನಕೇಶವ ದೇವಸ್ಥಾನದ ಆವರಣದಲ್ಲಿ ತಾಲೂಕಾ ಸ್ವೀಪ್ ಸಮೀತಿ, ಗ್ರಾಮ ಪಂಚಾಯತಿ ಹಾಗೂ ಎನ್.ಆರ್.ಎಲ್.ಎಮ್. ಮಹಿಳಾ ಸ್ವಸಹಾಯ ಸಂಘಗಳ ವತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮತದಾನದ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸಲು ನಾನಾ ಇಲಾಖೆಗಳು ಹಾಗೂ ಸಂಘಟನೆಗಳ ಸಹಕಾರದಿಂದ ಅಭಿಯಾನ ಆಯೋಜಿಸಲಾಗಿದೆ. ಪ್ರತಿಯೊಬ್ಬ ಪ್ರಜೆಯೂ ಚುನಾವಣೆಯಲ್ಲಿ ತಪ್ಪದೇ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದರು.
ಗ್ರಾಪಂ ಅಭಿವೃಧ್ದಿ ಅಧಿಕಾರಿ ವಿಶ್ವನಾಥ ಕಟ್ಟೆಗೌಡ್ರ ಅವರು ಸಾರ್ವಜನಿಕರಿಗೆ ಪ್ರತಿಜ್ಞಾ ವಿಧಿಯನ್ನು ಭೋಧಿಸುತ್ತ, `ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಚುನಾವಣೆಯನ್ನು ಎತ್ತಿ ಹಿಡಿಯುತ್ತೇವೆಂದು, ಚುನಾವಣೆಯಲ್ಲಿ ನಿರ್ಭೀತರಾಗಿ ಧರ್ಮ, ಜನಾಂಗ, ಜಾತಿಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆ ಎಂದು ಬೋಧಿಸಿದರು.
ಈ ಸಂದರ್ಭದಲ್ಲಿ ಪಿಎಸ್’ಐ ರವಿಕುಮಾರ, ಎನ್.ಆರ್.ಎಲ್.ಎಮ್ ತಾಲೂಕಾ ಸಂಯೋಜಕ ಹನುಮಂತಪ್ಪ ಅಗಸಿಬಾಗಿಲ, ನರೇಗಾ ಸಂಯೋಜಕ ಶಾನವಾಜ್ ಚಿಣಗಿ, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಮತ್ತು ಸದಸ್ಯರು, ಎನ್.ಆರ್.ಎಲ್.ಎಮ್. ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಎಸ್’ಬಿಎಂ ಸಂಯೋಜಕರು, ಗ್ರಾಪಂ ಸಿಬ್ಬಂದಿ ಹಾಗೂ ಬಿಎಫ್’ಟಿ ಸಿಬ್ಬಂದಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದ ಮತದಾನದ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.