ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಆಗ್ರಹ

ಮೈಸೂರು: ಮೇ:3: ಆಕ್ಸಿಜನ್ ಕೊರತೆಯಿಂದ 24 ಮಂದಿ ಮೃತಪಟ್ಟ ಘಟನೆಗೆ ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳೇ ನೇರ ಕಾರಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಆರೋಪಿಸಿದ್ದಾರೆ.
ಈ ಕುರಿತು ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಆರ್.ಧೃವನಾರಾಯಣ್, ಆಕ್ಸಿಜನ್ ಕೊರತೆಯಿಂದ 24 ಮಂದಿ ಮೃತಪಟ್ಟ ವಿಚಾರದಲ್ಲಿ ಚಾಮರಾಜನಗರ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಮುನ್ನೆಚ್ಚರಿಕೆ ಕ್ರಮವಹಿಸಿದ್ದರೆ ಅನಾಹುತ ತಪ್ಪಿಸಬಹುದಿತ್ತು. ಈ ಘಟನೆಗೆ ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳೇ ಕಾರಣರಾಗಿದ್ದು, ಇದು ದೊಡ್ಡ ಕ್ರಿಮಿನಲ್ ಅಪರಾಧವಾಗಿದೆ. ಅಲ್ಲಿನ ಡಿಸಿ, ಸಚಿವರ ಜೊತೆ ನಿನ್ನೆಯೇ ದೂರವಾಣಿ ಮೂಲಕ ಸಂಪರ್ಕಿಸಿದ್ದು ಆದರೆ ಸಂಪರ್ಕಕ್ಕೆ ಸಿಗಲಿಲ್ಲ. ಆದರೆ ಇಂದು ಬೆಳಗ್ಗೆ ಕರೆ ಮಾಡಿ ಸಮಸ್ಯೆ ಇಲ್ಲ ಎಂದರು ಎಂದು ಕಿಡಿಕಾರಿದರು.
ಒಂದು ವಾರದ ಹಿಂದೆಯೇ ಜಿಲ್ಲೆಯಲ್ಲಿ ಸಮಸ್ಯೆ ಇದೆ ಎಂದು ಗೊತ್ತಿದ್ದರೂ ಸುಮ್ಮನಿದ್ದದ್ದು ಅಪರಾಧ. ಜನಪ್ರತಿನಿಧಿಗಳಾಗಿ ನಾವು ಜನರ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.
ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ಕೊಡಲೇಬೇಕು. ಈ ಘಟನೆ ಬಗ್ಗೆ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದರು.