ತಾಲೂಕು ಕೆಡಿಪಿ ಸಭೆ: ಅಬಕಾರಿ ಅಧಿಕಾರಿ ವಿರುದ್ಧ ದದ್ದಲ್ ಗರಂ

ಮನೆ ಮನೆಯಲ್ಲಿ ಮದ್ಯ ಮಾರಾಟ : ಏನು ಮಾಡುತ್ತಿದ್ದೀರಿ- ತರಾಟೆ
ರಾಯಚೂರು, ನ.೨- ಪ್ರತಿಯೊಂದು ಗ್ರಾಮಗಳಲ್ಲಿ ಮನೆ ಮನೆಯಲ್ಲಿ ಹಾಗೂ ಸಣ್ಣ ಪುಟ್ಟ ಅಂಗಡಿಗಳಲ್ಲಿ ಮದ್ಯ ಮಾರಾಟ ಎಗ್ಗಿಲ್ಲದೆ ಸಾಗುತಿದೆ ಅಬಕಾರಿ ಅಧಿಕಾರಿಗಳು ಏನು ಕೆಲಸ ಮಾಡುತ್ತಿದ್ದೀರಿ ಕೂಡಲೇ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳದೇ ಹೋದರೆ ನಿಮ್ಮ ಮೇಲೆ ಕ್ರಮ ಕೈಗೊಳ್ಳಲಾಗುವುದೆಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅಬಕಾರಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ಇಂದು ತಾಲೂಕು ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ನಡೆಯಿತು.
ಅವರಿಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತಾಲೂಕ ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಗ್ರಾಮಗಳಲ್ಲಿ ಅಕ್ರಮ ಮದ್ಯಮಾರಾಟ ಎಗ್ಗಿಲ್ಲದೆ ಸಾಗುತ್ತಿದೆ.ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಿಂಗನೋಡಿ, ಶಕ್ತಿನಗರ ಗ್ರಾಮಗಳಲ್ಲಿ ಹೊಸ ಎಂಎಸ್‌ಐಎಲ್ ಮದ್ಯದ ಅಂಗಡಿಗಳನ್ನು ಪ್ರಾರಂಭ ಮಾಡಬೇಕೆಂದು ಎಂಎಸ್‌ಐಎಲ್ ತಾಲೂಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೂಡಲದಿನ್ನಿ ಗ್ರಾಮದಲ್ಲಿ ಟ್ರಾನ್ಸ್ ಫಾರಂ ಅನ್ನು ಕೂರಿಸಲು ಕೆಲ ಜನರು ವಿರೋಧ ವ್ಯಕ್ತಪಡಿಸಿದ್ದು, ಕೂಡಲೇ ಸಮಸ್ಯೆಯನ್ನು ಬಗೆಹರಿಸಿ ಟ್ರಾನ್ಸ್ಫಾರ್ಮರ್ ಅನ್ನು ಕುರಿ ಸುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗಿಲ್ಲೇಸುಗುರು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಕಳೆದ ಒಂದು ವರ್ಷದಿಂದ ಕರ್ತವ್ಯಕ್ಕೆ ಹಾಜರಾಗದೇ ಹಿನ್ನಲೆ ಗ್ರಾಮದ ಜನರಿಗೆ ಸಾಕಷ್ಟು ಸಮಸ್ಯೆ ಉಂಟಾಗಿದೆ. ಕೂಡಲೇ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲೂಕು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲ್ಮಲ ಕೆರೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದಾಗ ಆದಷ್ಟು ಬೇಗನೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿ ಸಭೆಗೆ ತಿಳಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಸಂತೋಷ್ ಕಾಮಗೌಡ, ತಹಸಿಲ್ದಾರ್ ಡಾ. ಹಂಪಣ್ಣ,ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಮುದೊಳಪ್ಪ,ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ರಾಮರೆಡ್ಡಿ, ಜಯಂತ್ ರಾವ್ ಪತಂಗಿ,ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.