ತಾಲೂಕ ಆಸ್ಪತ್ರೆ ವ್ಯವಸ್ಥೆ ಸುಧಾರಣೆಗೆ ಸೂಚನೆ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಅವಶ್ಯಕ ಗಮನ ನೀಡಬೇಕು

ವಿಜಯಪುರ, ಮಾ.19-ಮುದ್ದೇಬಿಹಾಳ ತಾಲೂಕಾ ಆಸ್ಪತ್ರೆಯ ವ್ಯವಸ್ಥೆಗಳನ್ನು ಖುದ್ದಾಗಿ ಪರಿಶೀಲಿಸಿ ಸುಧಾರಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ. ಸುಜಾತ ಕಳ್ಳಿಮನಿ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಇಂದು ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಫೆಬ್ರುವರಿ ಮಾಹೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ ಅವರು ತಾಲೂಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಜೊತೆಗೆ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಇರುವ ಬಗ್ಗೆ ಗಮನಕ್ಕೆ ಬಂದಿದ್ದು ತಕ್ಷಣ ಈ ಕುರಿತು ಪರಿಶೀಲನೆ ನಡೆಸಬೇಕು, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನ ನೀಡುವಂತೆ ಸೂಚನೆ ನೀಡಿದರು.
ಈ ಆಸ್ಪತ್ರೆಯಲ್ಲಿ ನಿಗದಿ ಪಡಿಸಿದ ಗುರಿಗೆ ಅನುಗುಣವಾಗಿ ಶಸ್ತ್ರಚಿಕಿತ್ಸೆ ಕ್ರಮಗಳನ್ನು ಕೈಗೊಳ್ಳಬೇಕು. 100 ಹಾಸಿಗೆ ಆಸ್ಪತ್ರೆ ಇದಾಗಿರುವುದರಿಂದ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಿಗಾ ವಹಿಸಬೇಕು. ಸೂಕ್ತ ವೈದ್ಯರನ್ನು ನಿಯೋಜಿಸುವ ಮತ್ತು ಇತರೆ ವ್ಯವಸ್ಥೆ ಸುಧಾರಣೆಗೆ ವಿಶೇಷ ಗಮನ ನೀಡಲು ಅವರು ಸೂಚನೆ ನೀಡಿದರು.
ವಿವಿಧ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿಗಳ ಕ್ರಿಯಾಯೋಜನೆ ಅನುಮೋದನೆ ಅನ್ವಯ ಗ್ರಾಮಪಂಚಾಯತ್‍ವಾರು ಕೈಗೊಂಡು ಕಾಮಗಾರಿಗಳ ಬಗ್ಗೆ ವರದಿ ಸಲ್ಲಿಸಬೇಕು. ಸೋಲಾರ್ ವಿದ್ಯುತ್ ಬಳಕೆಯ ಬಗ್ಗೆ ಸೂಕ್ತ ಅರಿವು ಮೂಡಿಸುವ ಜೊತೆಗೆ ಸೋಲಾರ್‍ಗೆ ಸಂಬಂಧಪಟ್ಟ ಯೋಜನೆಯ ಸಮರ್ಪಕ ಅನುಷ್ಠಾನ ಕುರಿತು ಪರಿಶೀಲನೆ ವರದಿ ಸಲ್ಲಿಸುವಂತೆ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಅವಶ್ಯಕ ಗಮನ ನೀಡಬೇಕು. ಪರೀಕ್ಷಾ ಸಿದ್ಧತಾ ಕಾರ್ಯ ಯೋಜನೆ ಬಗ್ಗೆ ಗಮನ ನೀಡಬೇಕು. ಜಿಲ್ಲೆಯಲ್ಲಿ ಬಾಣಂತಿಯರು ಮತ್ತು ಮಕ್ಕಳಿಗೆ ನೇರವಾಗಲು ಎಲ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯವೈಖರಿ ಬಗ್ಗೆ ಸೂಕ್ತ ನಿಗಾ ಇಡುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಗ್ರಾಮಾಂತರ ಪ್ರದೇಶದ ಬಿ.ಪಿ.ಎಲ್ ನೈಜ ಕುಟುಂಬಗಳಿಗೆ ಪಡಿತರ ಚೀಟಿ ದೊರೆಯುವಂತೆ ನೋಡಿಕೊಳ್ಳಬೇಕು. ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ, ಜಾನುವಾರುಗಳಿಗೆ, ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು, ನೀರಿನ ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಳ್ಳುಲು ಸೂಚಿಸಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಪ್ರಭುಗೌಡ ಪಾಟೀಲ, ಅವರು ಜಿಲ್ಲಾ ಕೈಗಾರಿಕಾ ಕೇಂದ್ರದ ಕಛೇರಿ ಸುಚಿತ್ವ ಮತ್ತು ಸುಧಾರಣೆಗೆ ಕ್ರಮ ಕೈಗೊಳ್ಳಬೇಕು. ಜಲಜೀವನ ಮಿಷನ್ ಮತ್ತು ಜಲಧಾರೆ, ಯೋಜನೆಯಡಿ ನೀರಿನ ಸಮರ್ಪಕ ನಿರ್ವಹಣೆ, ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ ಲಘು ಕಾಲುವೆ ನಿರ್ಮಾಣ ಮತ್ತು ದುರಸ್ತಿಗೆ ಸೂಕ್ತ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಗೋವಿಂದ ರೆಡ್ಡಿ, ಅವರು ಜಲಜೀವನ ಮಿಷನ್ ಮತ್ತು ಜಲಧಾರೆ, ಬೇಸಿಗೆ ಕಾಲದಲ್ಲಿ ಸಮರ್ಪಕ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕರೋನಾ 2 ನೇ ಅಲೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯಯೋಜನಾಧಿಕಾರಿ ನಿಂಗಪ್ಪ ಗೋಟೆ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಶ್ರೀ ಅಲ್ಲಾಪುರ್ ಅವರು ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.