ತುಮಕೂರು ವಿವಿ ನೂತನ ಕುಲಪತಿ ವೆಂಕಟೇಶ್ವರಲು ಅಧಿಕಾರ ಸ್ವೀಕಾರ

ತುಮಕೂರು, ಜು. ೨೧- ತುಮಕೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿಗಳಾಗಿ ಪ್ರೊ. ಎಂ. ವೆಂಕಟೇಶ್ವರಲು ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಪ್ರಭಾರ ಕುಲಪತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೊ. ಕೇಶವ ಅವರು ನೂತನ ಕುಲಪತಿ ಪ್ರೊ. ವೆಂಕಟೇಶ್ವರಲು ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ನೂತನ ಕುಲಪತಿ ಪ್ರೊ. ವೆಂಕಟೇಶ್ವರಲು ಅವರು, ನನ್ನ ಅಧಿಕಾರಾವಧಿಯಲ್ಲಿ ಎಲ್ಲರ ಮೆಚ್ಚುಗೆ ಗಳಿಸುವಂತಹ ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತೇನೆ ಎಂದು ಹೇಳಿದರು.
ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಪ್ರತಿಕ್ಷಣ ಶ್ರಮಿಸುತ್ತೇನೆ. ಅದೇ ರೀತಿ ಬೋಧಕ-ಬೋಧಕೇತರ ಅಧಿಕಾರಿ ಸಿಬ್ಬಂದಿಗಳಿಂದ ಯಾವುದೇ ರೀತಿ ಲೋಪವಿಲ್ಲದ ಕೆಲಸವನ್ನು ನಿರೀಕ್ಷಿಸುತ್ತೇನೆ ಎಂದು ತಿಳಿಸಿದ ಅವರು, ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಸುಮಾರು ೨೦ ತಿಂಗಳುಗಳ ಕಾಲ ಕುಲಸಚಿವನಾಗಿ ಸೇವೆ ಸಲ್ಲಿಸಿದ ಅನುಭವವನ್ನು ಹಂಚಿಕೊಂಡರು.
ಮುಂದಿನ ೪ ವರ್ಷಗಳ ಕಾಲ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಸೇವೆ ಸಲ್ಲಿಸಲು ಅವಕಾಶ ದೊರೆತಿದ್ದು, ಅಧಿಕಾರಿಗಳು, ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು ವಿಶ್ವವಿದ್ಯಾನಿಲಯದ ಬೆಳವಣಿಗೆಗೆ ಅಗತ್ಯ ಸಹಕಾರ ನೀಡಬೇಕು ಎಂದರು.
ಇದಕ್ಕೂ ಮುನ್ನ ವಿಶ್ವವಿದ್ಯಾನಿಲಯದ ಪ್ರವೇಶ ದ್ವಾರದ ಬಳಿಯಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ರಾಜಾಸಾಬ್, ಕುಲಸಚಿವ ಪ್ರೊ. ಶಿವಚಿತ್ತಪ್ಪ, ನಿರ್ಮಲರಾಜು, ಸಿಂಡಿಕೇಟ್ ಸದಸ್ಯರು, ಬೋಧಕ-ಬೋಧಕೇತರ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.