
(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು,ಆ.೧೭:ಮೇಕೆದಾಟು ಪಾದಯಾತ್ರೆ ಹೈಡ್ರಾಮ ಆಡಿ ಕನ್ನಡಿಗರ ಮೇಲೆ ಮಕ್ಮಲ್ ಟೋಪಿ ಇಟ್ಟ ಕಾಂಗ್ರೆಸ್ ಪಕ್ಷ ಈಗ ಐಎನ್‌ಡಿಐಎ (ಇಂಡಿಯಾ)ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ. ಕನ್ನಡಿಗರಿಗೆ ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸ ದ್ರೋಹವೆಸಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟೀಕಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವ ಬಗ್ಗೆ ಟ್ವಿಟರ್‌ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಆವರು, ಮಳೆ ಅಭಾವದಿಂದ ಜಲಾಶಯಗಳು ತುಂಬಿಲ್ಲ, ರೈತರ ಬೆಳೆಗೆ ನೀರಿಲ್ಲ, ಬೆಂಗಳೂರಿಗೆ ಕುಡಿಯುವ ನೀರಿಗೂ ತತ್ವಾರ, ನಮ್ಮ ಹೊಟ್ಟೆಗೇ ಇಟ್ಟಿಲ್ಲ, ನೆರೆಮನೆಯವರ ಜುಟ್ಟಿಗೆ ಮಲ್ಲಿಗೆ ಸರ್ಕಾರ ಹೊರಟಿದೆ ಎಂದು ಕಿಡಿಕಾರಿದ್ದಾರೆ.
ಕನ್ನಡಿಗರಿಗೆ ವಂಚಿಸಿ ರಾಜಾರೋಷವಾಗಿ ನೀರು ಹರಿಸುವ ಮೂಲಕ ತಮಿಳುನಾಡು ಜತೆ ರಾಜಕೀಯ ಚೌಕಾಭಾರ ಆಡುತ್ತಿದೆ. ಇದೇನು ಇನ್ನೊಂದು ಗ್ಯಾರಂಟಿನಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯ ಗೆಲುವಿಗೆ ಕಾವೇರಿ ಹಿತವನ್ನು ನೆರೆ ರಾಜ್ಯಕ್ಕೆ ಅಡವಿಟ್ಟಿರುವ ಕಾಂಗ್ರೆಸ್ ಸರ್ಕಾರ, ತಮಿಳುನಾಡಿಗೆ ಬೆದರಿ ಶರಣಾಗಿದೆ. ಕಾವೇರಿ ಜಲನಿರ್ವಹಣಾ ಪ್ರಾಧಿಕಾರ ಸಭೆಯಿಂದಲೇ ಹೊರ ನಡೆದ ಸುಪ್ರೀಂಕೋರ್ಟ್‌ನಲ್ಲಿ ರಾಜ್ಯದ ವಿರುದ್ಧ ಅರ್ಜಿ ಹಾಕಿದ ತಮಿಳುನಾಡಿನ ಎದುರು ದೈನೇಸಿಯಾಗಿ ಮಂಡಿಯೂರಿದ್ದು, ಕನ್ನಡಿಗರ ಸ್ವಾಭಿಮಾನಕ್ಕೆ ಕೊಟ್ಟ ಕೊಡಲಿ ಪೆಟ್ಟು ಎಂದು ಅವರು ಟ್ವೀಟ್ ಮಾಡಿದ್ದಾರೆ.
ಹಿಂದಿನ ಪ್ರತಿ ಸರ್ಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದೆವು. ಇಂತಹ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರ್ಕಾರವು ನೆರೆ ರಾಜ್ಯ ಸುಪ್ರೀಂಕೋರ್ಟ್‌ಗೆ ಆರ್ಜಿ ಹಾಕಿದ ಕ್ಷಣ ಬೆದರಿ ಕೈ ಚೆಲ್ಲಿದೆ. ಸಂಕಷ್ಟ ಸ್ಥಿತಿ ಬಗ್ಗೆ ಸರ್ಕಾರ ಸುಪ್ರೀಂಕೋರ್ಟ್‌ಗೆ ಏಕೆ ಮನವರಿಕೆ ಮಾಡಿಕೊಡಲಿಲ್ಲ. ಕಾನೂನು ತಜ್ಞರು, ಪ್ರತಿಪಕ್ಷ ಮುಖಂಡರ ಜತೆ ಚರ್ಚಿಸದೆ ವಾಯುವೇಗದಲ್ಲಿ ತಮಿಳುನಾಡಿಗೆ ನೀರು ಹರಿಸಿದ ಗುಟ್ಟೇನು ಎಂದು ಅವರು ಪ್ರಶ್ನಿಸಿದ್ದಾರೆ.
ಜಲಸಂಪನ್ಮೂಲ ಸಚಿವರಾಗಿರುವ ಉಪಮುಖ್ಯಮಂತ್ರಿಗಳು ತಾವು ಮಂತ್ರಿಯಾಗಿರುವುದು ಕರ್ನಾಟಕಕ್ಕೊ ತಮಿಳುನಾಡಿಗೋ ಎಂಬುದು ಸ್ಪಷ್ಟಪಡಿಸಬೇಕಿದೆ. ಕಾವೇರಿ ಕೀಲಿ ಕೇಂದ್ರದ ಬಳಿ ಇದೆ ಎಂದಾದರೆ ಇವರ ಹೊಣೆ ಏನು, ಆ ಕೀಲಿ ಸ್ಟಾಲಿನ್ ಅವರ ಕೈಯಲ್ಲಿದೆಯೋ ಸೋನಿಯಾ ಅವರ ಕೈಯಲ್ಲಿದ್ದೇಯೋ ಎಂದು ಪ್ರಶ್ನಿಸಿದ್ದಾರೆ.
ತಾಖತ್ತಿದ್ದರೆ ಕೋರ್ಟಿಗೆ ಹೋಗಿ ಎಂದು ರೈತರಿಗೆ ಉಪಮುಖ್ಯಮಂತ್ರಿಗಳು ಹೇಳಿರುವುದು ದರ್ಪ ದುರಾಹಂಕಾರದ ಪರಕಾಷ್ಠೆ. ಕನ್ನಡಿಗರು ಕೊಟ್ಟ ಪೆನ್ ಈಗ ಗನ್ ರೂಪ ತಳೆದಿದೆಯೇ ಕನ್ನಡಿಗರನ್ನು ಕೇಳಿ ಕೇಳಿ ಪಡೆದುಕೊಂಡ ಪೆನ್ ಈಗ ಪೆಚ್ಚಗೆ ತೆಪ್ಪಗೆ ಮಲಗಿದೆಯೇ ಎಂದು ಅವರು ವ್ಯಂಗ್ಯವಾಡಿದ್ದಾರೆ.
ಅಧಿಕಾರಕ್ಕೆ ಬಂದ ೧೦೦ ದಿನ ಕಳೆಯುವ ಮೊದಲೇ ಕೊಳ್ಳಿ ಇಡುವ ಕೆಲಸವನ್ನು ಮಾಡಿಬಿಟ್ಟಿದೆ. ಈ ಅನ್ಯಾಯ ಸಹಿಸುವ ಪ್ರಶ್ನೆಯೇ ಇಲ್ಲ ತಮಿಳುನಾಡಿಗೆ ನೀಡು ಹರಿಸುವುದನ್ನು ನಿಲ್ಲಿಸಬೇಕು ಸಂಕಷ್ಟ ಸೂತ್ರ ಪಾಲನೆಗೆ ಒತ್ತಡ ಹೇರಬೇಕು. ಕಾವೇರಿ ವಿಷಯದಲ್ಲಿ ಕಾಂಗ್ರೆಸ್‌ನದು ಸದಾ ಎರಡು ನಾಲಿಗೆ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.