ದಲಿತರ ಕುರಿತು ಅವಹೇಳನ: ಸಿದ್ಧರಾಮಯ್ಯ ವಿರುದ್ಧ ಕಲಬುರಗಿಯಲ್ಲಿ ರ್ಯಾಲಿ

ಕಲಬುರಗಿ.ನ.2: ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ವಿಧಾನಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರ ಅವಹೇಳನಕಾರಿ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಎಸ್‍ಸಿ ಮೋರ್ಚಾ ನವೆಂಬರ್ 3ರಂದು ನಗರದಲ್ಲಿ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡಿದೆ.
ಈ ನಿಮಿತ್ಯ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಪ್ರತಿಭಟನಾ ರ್ಯಾಲಿ ಕುರಿತ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅಂಬಾರಾಯ್ ಅಷ್ಟಗಿ ಅವರು ಮಾತನಾಡಿ, ಸಿದ್ಧರಾಮಯ್ಯ ಅವರು ದಲಿತ ವಿರೋಧಿ ಹೇಳಿಕೆಯನ್ನು ನೀಡಿದ್ದು ಖಂಡನಾರ್ಹ ಎಂದರು.
ಸಿದ್ಧರಾಮಯ್ಯ ಅವರು ಕೂಡಲೇ ತಮ್ಮ ಅವಹೇಳನಕಾರಿ ಹೇಳಿಕೆಯನ್ನು ಹಿಂಪಡೆದುಕೊಂಡು ಸ್ವಾಭಿಮಾನಿ ದಲಿತರ ಕ್ಷಮೆ ಕೇಳಬೇಕು ಎಂದು ಅವರು ಒತ್ತಾಯಿಸಿದರು.
ಬುಧವಾರ ನವೆಂಬರ್ 3ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಲು ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಬಿಜೆಪಿ ಎಸ್‍ಸಿ ಮೋರ್ಚಾ ಮಹಾನಗರ ಜಿಲ್ಲಾಧ್ಯಕ್ಷ ದೇವಿಂದ್ರ ಎಸ್. ಸಿನ್ನೂರ್, ರಾಜ್ಯ ಕಾರ್ಯದರ್ಶಿ ನಾಮದೇವ್ ರಾಠೋಡ್, ರಾಜ್ಯ ಕಾರ್ಯಕಾರಿಣಿ ಸದಸ್ಯ ರವಿಚಂದ್ರ ಕ್ರಾಂತಿಕರ್ ಮುಂತಾದವರು ಪಾಲ್ಗೊಂಡಿದ್ದರು.