ದಾಖಲೆಯ ಒಂದು ಸಾವಿರ ಯುನಿಟ್‌ ರಕ್ತದಾನ: ಕಟೀಲ್‌

ಮಂಗಳೂರು, ಮೇ ೧- ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ, ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್, ಕೆ.ಎಂ.ಸಿ ಆಸ್ಪತ್ರೆ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇವರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರವನ್ನು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ದೇಶದಲ್ಲಿ ಕೋವಿಡ್ 2ನೇ ಅಲೆ ವ್ಯಾಪಕವಾಗಿ ಹಬ್ಬುತ್ತಿದೆ. ಕಳೆದ ಬಾರಿ ಕೋವಿಡ್ ಹರಡುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಜೆ.ಪಿ ನಡ್ಡಾ ಅವರು ಪ್ರಧಾನಿ ನರೇಂದ್ರ ಮೋದಿಜೀ ಅವರ ಆಶಯದಂತೆ ಸೇವಾ ಹೀ ಸಂಘಟನ್ ಎನ್ನುವ‌ ಆಂದೋಲನಕ್ಕೆ ಕರೆ ನೀಡಿದ್ದರು. ದೇಶದಾದ್ಯಂತ ನಮ್ಮೆಲ್ಲಾ ಕಾರ್ಯಕರ್ತರು ಅಭೂತಪೂರ್ವವಾಗಿ ಸೇವಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಈಗ ಎದ್ದಿರುವ ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಕೂಡ ಬಿಜೆಪಿ ಕಾರ್ಯಕರ್ತರು ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆ ನಿಟ್ಟಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಮಂಗಳೂರು ನಗರ ದಕ್ಷಿಣ ಆಯೋಜಿಸಿದ ರಕ್ತದಾನ ಶಿಬಿರ ಕಾರ್ಯಕ್ರಮವು ರಾಜ್ಯಕ್ಕೆ ಮಾದರಿಯಾಗಿದೆ. ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ರಾಜ್ಯದಲ್ಲೇ ಪ್ರಪ್ರಥಮವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ‌ರಕ್ತದಾನದಂತಹ ಕಾರ್ಯ ಮಾಡುತ್ತಿದೆ. ಒಂದು ದಿನದಲ್ಲಿ ಸುಮಾರು 1 ಸಾವಿರ ಯುನಿಟ್ ರಕ್ತದಾನ ಮಾಡಿದ್ದಾರೆ. ಅದಕ್ಕಾಗಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮಂಡಲ‌ ಅದ್ಯಕ್ಷ ವಿಜಯ್ ಕುಮಾರ್ ಶೆಟ್ಟಿ ಅವರನ್ನು ಅಭಿನಂದಿಸುತ್ತೇನೆ. ಇಡೀ ರಾಜ್ಯದಲ್ಲಿ ಇಂತಹ ರಕ್ತದಾನ ಶಿಬಿರಗಳನ್ನು ಆಯೋಜಿಸಬೇಕು ಎಂದರು. ಬಳಿಕ ಮಾತನಾಡಿದ ಶಾಸಕ ಕಾಮತ್, 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಲಸಿಕೆ ವಿತರಣಾ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ. ನಾಳಿನಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ. ತಜ್ಞರ ಪ್ರಕಾರ ಲಸಿಕೆ ನೀಡಿದ ಕನಿಷ್ಟ 50 ದಿನಗಳ ಕಾಲ ರಕ್ತದಾನ ಮಾಡುವಂತಿಲ್ಲ. ಆ ಸಂದರ್ಭದಲ್ಲಿ ರಕ್ತದ ಕೊರತೆ ಉಂಟಾಗಬಹುದು ಎಂದು ತಜ್ಞರು ಅಭಿಪ್ರಾಯ ಪಟ್ಟಿರುವ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಸೂಚನೆ ಹಾಗೂ ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ‌ಅವರ ಮಾರ್ಗದರ್ಶನದಲ್ಲಿ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್, ಕೆ.ಎಂ.ಸಿ ಆಸ್ಪತ್ರೆ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ಈ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಪ್ರತಿ ವಾರ್ಡಿಗೆ ಬಸ್ ವ್ಯವಸ್ಥೆ ಮಾಡಲಾಗಿದ್ದು, ಕೋವಿಡ್ ನಿಯಂತ್ರಣಕ್ಕೆ ಸರಕಾರ ಸೂಚಿಸಿರುವ ನಿಯಮಾವಳಿಗಳನ್ನು ಪಾಲಿಸಿಕೊಂಡು ಕಾರ್ಯಕರ್ತರನ್ನು ರಕ್ತದಾನ ಶಿಬಿರಕ್ಕೆ ಕರೆತರಲಾಗುತ್ತಿದೆ. ಜಿಲ್ಲೆಯಲ್ಲಿ ಮಂಗಳೂರು ನಗರ ದಕ್ಷಿಣ ರಕ್ತದಾನದಲ್ಲಿ ದಾಖಲೆ ಬರೆದಿದೆ ಎಂದರು. ಮಂಗಳೂರು ನಗರ ದಕ್ಷಿಣ ಮಂಡಲ ಬಿಜೆಪಿ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ ಅವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಅವರ ಸೂಚನೆಯ ಮೇರೆಗೆ ನಮ್ಮ‌ ಶಾಸಕರಾದ‌ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರವು ಬಹಳಷ್ಟು ಯಶಸ್ವಿಯಾಗಿದೆ. ನಮ್ಮ ಪಕ್ಷದ ಪಾಲಿಕೆ ಸದಸ್ಯರು ಹಾಗೂ ಪ್ರತಿ ವಾರ್ಡಿನ ಬಿಜೆಪಿ ಪ್ರಮುಖರು ತಮ್ಮ ಕಾರ್ಯಕರ್ತರೊಂದಿಗೆ ಬಂದು ರಕ್ತದಾನ ಮಾಡುತಿದ್ದಾರೆ. ನಮ್ಮ ಧ್ಯೇಯಗಳಲ್ಲೊಂದಾದ ಸೇವಾ ಹೀ ಸಂಘಟನ್ ಈ ಮೂಲಕ ಸಾಕಾರಗೊಳ್ಳುತ್ತಿದೆ ಎಂದರು.

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಪ್ರಮುಖರಾದ ಹನುಮಂತ್ ಕಾಮತ್ ಮಾತನಾಡಿ, ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಪ್ರಸ್ತುತ ಶಾಸಕರಾಗಿರುವ ವೇದವ್ಯಾಸ್ ಕಾಮತ್ ಅವರ ಮುಂದಾಳುತ್ವದಲ್ಲಿ ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ‌ಪ್ರತಿನಿತ್ಯ 5 ರಿಂದ 8 ಸಾವಿರ ಜನರಿಗೆ ಆಹಾರದ ವ್ಯವಸ್ಥೆ ಮಾಡಲಾಗಿದೆ. ವೆನ್ಲಾಕ್ ಆಸ್ಪತ್ರೆಗೆ ಸತತ 3 ತಿಂಗಳ ಕಾಲ ಉಚಿತ ಊಟದ‌ ವ್ಯವಸ್ಥೆ ಮಾಡಲಾಗಿತ್ತು. ಕಳೆದ 23 ವರ್ಷಗಳಿಂದ ನಿರಂತರವಾಗಿ ರಕ್ತದಾನ ಶಿಬಿರವನ್ನು ಟ್ರಸ್ಟಿನ ಮೂಲಕ ಆಯೋಜಿಸಲಾಗುತ್ತಿದೆ. ದೇಶವು ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿರುವ ಸಂದರ್ಭದಲ್ಲಿ ಜವಬ್ದಾರಿಯುತ ನಾಗರಿಕರಾಗಿ ಟ್ರಸ್ಟಿನ ಪ್ರಮುಖರಾದ ನರೇಶ್ ಶೆಣೈ, ನರೇಶ್ ಪ್ರಭು ಹಾಗೂ ಚೇತನ್ ಕಾಮತ್ ಅವರ ನೇತೃತ್ವದಲ್ಲಿ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸದಸ್ಯರು ಸೇವಾ ಕಾರ್ಯದಲ್ಲಿ ನಿರತರಾಗಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಪ್ರೇಮಾನಂದ ಶೆಟ್ಟಿ, ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಮೈಸೂರು ಎಲೆಕ್ಟ್ರಿಕಲ್ ಕಂಪೆನಿ ನಿಗಮದ ಅಧ್ಯಕ್ಷರಾದ ಸಂತೋಷ್ ರೈ ಬೋಳಿಯಾರು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಬಿಜೆಪಿ ಜಿಲ್ಲಾಧ್ಯಕ್ಷ‌ ಸುದರ್ಶನ್ ಎಂ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಸುಧೀರ್ ಶೆಟ್ಟಿ ಕಣ್ಣೂರು, ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜಪ್ಪಿನಮೊಗರು,ಪಾಲಿಕೆ ಸ್ಥಾಯಿ ಸಮತಿಯ ಅಧ್ಯಕ್ಷರಾದ ಸಂದೀಪ್ ಗರೋಡಿ, ಲೀಲಾವತಿ ಪ್ರಕಾಶ್, ಸ್ಥಳೀಯ ಕಾರ್ಪೋರೇಟರ್ ಪೂರ್ಣಿಮಾ, ಪಾಲಿಕೆ ನಾಮ ನಿರ್ದೇಶಿತ ಸದಸ್ಯರಾದ ರಮೇಶ್ ಕಂಡೆಟ್ಟು, ಭಾಸ್ಕರ್ ಚಂದ್ರ‌ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಮುಖರು, ಕೆ.ಎಂ.ಸಿ ಆಸ್ಪತ್ರೆಯ ಪ್ರಮುಖರು ಉಪಸ್ಥಿತರಿದ್ದರು.