ದಾವಣಗೆರೆಗೆ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ

ದಾವಣಗೆರೆ.ಜ.೧೯- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಭರ್ಜರಿ ತಯಾರಿಯಲ್ಲಿರುವ ಕಾಂಗ್ರೆಸ್ ನಡೆಸುತ್ತಿರುವ ಬಸ್ ಯಾತ್ರೆ ಇಂದು ಸಂಜೆ ದಾವಣಗೆರೆಗೆ ತಲುಪಲಿದೆ.
ಕಾಂಗ್ರೆಸ್ ಮುಖಂಡರು ಭಾಗಿಯಾಗಿರುವ ಪ್ರಜಾಧ್ವನಿ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಜೆಪಿ ಭ್ರಷ್ಟ ಸರ್ಕಾರದ ವಿರುದ್ಧ ಧ್ವನಿ ಎತ್ತಲು ಹಾಗೂ ಜನರಿಗೆ ಮನವರಿಕೆ ಮಾಡಿಕೊಡಲು ಪ್ರಜಾಧ್ವನಿ ಯಾತ್ರೆ ದಾವಣಗೆರೆಯ ಹೈಸ್ಕೂಲ್ ಮೈದಾನದತ್ತ ಬರಲಿದೆ. ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ನಾಯಕರ ಫೆಕ್ಸ್ ಗಳು ರಾರಾಜಿಸುತ್ತಿವೆ.ಈ ಯಾತ್ರೆಯಲ್ಲಿ ಕರ್ನಾಟಕದ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸಿಂಗ್ ಸುರ್ಜಿವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್, ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಧ್ರುವನಾರಾಯಣ, ರಾಮಲಿಂಗಾ ರೆಡ್ಡಿ ಮತ್ತು ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ ಹಾಗೂ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ ಮಂಜಪ್ಪ ಅಧ್ಯಕ್ಷತೆ ವಹಿಸಲಿದ್ದು ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಹಾಗೂ ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.

ನಗರದ ಹೈಸ್ಕೂಲ್ ಮೈದಾನದಲ್ಲಿ ಸುಮಾರು ಒಂದು ಲಕ್ಷ ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದ್ದು.ಜಿಲ್ಲೆಯ ಹಾಗೂ ಸುತ್ತಮುತ್ತಲಿನ ಜಿಲ್ಲೆಯ ಜನರು ಆಗಮಿಸಲು ಹಾಗೂ ವಾಹನಗಳ ಪಾರ್ಕಿಂಗ್ ಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ.ಪ್ರಜಾಧ್ವನಿಯ ಯಾತ್ರೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿದ್ದು.ಈ ಬಾರಿ ಕಾಂಗ್ರೆಸ್ ಗೆಲುವಿಗೆ ಕಾರಣವಾಗಲಿದೆ ಎಂಬ ಮಾತುಗಳು ಕಾರ್ಯಕರ್ತರಿಂದ ಕೇಳಿಬರುತ್ತಿದೆ.