ದಾವಣಗೆರೆಗೆ ನಾಳೆ ಪ್ರಜಾಧ್ವನಿ ಯಾತ್ರೆ ಆಗಮನ

ದಾವಣಗೆರೆ.ಜ.೧೮: ಬಿಜೆಪಿ ಪಾಪದ ಕೊಡ ತುಂಬಿದೆ. ಶೇಕಡಾ 40ರಷ್ಟು ಕಮಿಷನ್ ಸರ್ಕಾರ. ಬಿಜೆಪಿ ಭ್ರಷ್ಟ ಸರ್ಕಾರದ ವಿರುದ್ಧ ಧ್ವನಿ ಎತ್ತಲು ಹಾಗೂ ಜನರಿಗೆ ಮನವರಿಕೆ ಮಾಡಿಕೊಡಲು ಜ. 19ರಂದು ಪ್ರಜಾಧ್ವನಿ ಯಾತ್ರೆ ದಾವಣಗೆರೆಗೆ ಬರಲಿದೆ ಎಂದು ಮಾಜಿ ಸಚಿವ ಎಸ್ . ಎಸ್‌. ಮಲ್ಲಿಕಾರ್ಜುನ್ ತಿಳಿಸಿದರು. ನಗರದ ಹೈಸ್ಕೂಲ್ ಮೈದಾನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3ಗಂಟೆಗೆ  ಬಸ್ ಮೂಲಕ ಆಗಮಿಸಲಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚಿ‌ನ ಜನರು ಕಾರ್ಯಕ್ರಮದಲ್ಲಿ ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.ಕರ್ನಾಟಕದ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸಿಂಗ್ ಸುರ್ಜಿವಾಲ ರವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ,, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್, ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ದ್ರುವನಾರಾಯಣ, ರಾಮಲಿಂಗಾ ರೆಡ್ಡಿ ಮತ್ತು ಹಿರಿಯ ಮುಖಂಡರು ಆಗಮಿಸಲಿದ್ದಾರೆ ಎಂದು ವಿವರಿಸಿದರು. ಜಿಲ್ಲಾಧ್ಯಕ್ಷ ಹೆಚ್.ಬಿ ಮಂಜಪ್ಪರ ಅಧ್ಯಕ್ಷತೆಯಲ್ಲಿ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಹಾಗೂ ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ರಾಜ್ಯದಲ್ಲಿ ಅಕ್ರಮವಾಗಿ ಬಿಜೆಪಿ ಸರ್ಕಾರ ರಚಿಸಿದೆ. ಒಂದಲ್ಲಾ ಎರಡಲ್ಲಾ ಸಾವಿರಾರು ಹಗರಣಗಳನ್ನು ನೋಡುತ್ತಿದ್ದೇವೆ. ದಾವಣಗೆರೆಯಲ್ಲಿ ನಮ್ಮ ಸರ್ಕಾರ ಮಂಜೂರು ಮಾಡಿದ ಕೆಲಸ ಆಗಿಲ್ಲ. 82 ವರ್ಷದ ಕೆಂಪಣ್ಣರ ಸ್ಥಿತಿ ಏನಾಗಿದೆ. ಜೈಲಿಗೆ ಹಾಕೋದು ಹೆದರಿಸೋ ಕೆಲಸ ಬಿಜೆಪಿ ಮಾಡುತ್ತಿದೆ. ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆದಾರರ ಸಂಘ ಹಾಗೂ ಪಾಲಿಕೆ ಅಧಿಕಾರಿಗಳು ಕೆಲಸ ಮಾಡುತ್ತಿದ್ದರು. ಆದ್ರೆ ಈಗ ಬಿಜೆಪಿಯವರು ಆಸ್ತಿ ಮಾಡಲು ಹೊರಟಿದ್ದಾರೆ. ಕಮೀಷನ್ ಆಸೆಗಾಗಿ ಅಭಿವೃದ್ಧಿ ಮಾಡುತ್ತಿಲ್ಲ ಎಂದು ಮಲ್ಲಿಕಾರ್ಜುನ್ ಆಕ್ರೋಶ ವ್ಯಕ್ತಪಡಿಸಿದರು.