ದಿಲ್ಲಿ ನಾಯಕರ ಬೆಂಬಲದಿಂದ ನಾನು ಸೇಫ್

ಬೆಂಗಳೂರು,ಡಿ.೨- ಪಕ್ಷದ ಹೈಕಮಾಂಡ್ ಆಶೀರ್ವಾದ ಮತ್ತು ಬೆಂಬಲ ಇರುವುದರಿಂದ ನಾನಿನ್ನೂ ಬದುಕಿದ್ದೇನೆ ಇಲ್ಲದಿದ್ದರೆ ಷಡ್ಯಂತರ ಮಾಡಿ ಯಾವಾಗಲೋ ನನ್ನನ್ನು ರಾಜಕೀಯವಾಗಿ ಮುಗಿಸುತ್ತಿದ್ದರು ಎಂದು ಶಾಸಕ ರಮೇಶ ಜಾರಕಿಹೊಳಿ ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.

ಈ ಮೂಲಕ ಬಿಜೆಪಿ ನಾಯಕರ ವಿರುದ್ಧ ಪರೋಕ್ಷವಾಗಿ ಅವರು ವಾಗ್ದಾಳಿ ನಡೆಸಿದ್ದಾರೆ.

ಸ್ಥಳೀಯ ಸಂಸ್ಥೆಗಳಿಂದ ಈ ತಿಂಗಳ ೧೦ರಂದು ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿ, ವರಿಷ್ಠರ ಜೊತೆ ಮಾತುಕತೆ ನಡೆಸಿದ ಬಳಿಕ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಹೋದರ ಲಖನ್ ಜಾರಕಿಹೊಳಿ ಅವರಿಗೆ ಎರಡನೇ ಪ್ರಾಶಸ್ತ್ಯದ ಮತಗಳನ್ನು ನೀಡುವ ಕುರಿತು ಪಕ್ಷದ ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ಗೆಲ್ಲುವ ಜೊತೆಗೆ ಸಹೋದರನ ಗೆಲುವು ಖಚಿತ ಎಂದು ಅವರು ಹೇಳಿದರು.

ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವುದು ನಮ್ಮ ಉದ್ದೇಶ. ಇದಕ್ಕಾಗಿ ಕಾರ್ಯತಂತ್ರವನ್ನು ರೂಪಿಸಲಾಗುತ್ತಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ಅವರು ಬಿಜೆಪಿ ಹೈಕಮಾಂಡಿಗೆ ಬ್ಲಾಕ್ ಮೇಲೆ ಮಾಡುತ್ತಿದ್ದಾರೆ ಎನ್ನುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಎಲ್ಲದಕ್ಕೂ ಉತ್ತರ ನೀಡುತ್ತೇನೆ ಎಂದು ತಿಳಿಸಿದ್ದಾರೆ.