
ಬೆಂಗಳೂರು, ನ. ೫-ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ನ.೧೦ರಿಂದ ೧೨ರ ವರೆಗೆ ರಾಜಧಾನಿ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ೨ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಅದೇ ರೀತಿಯಲ್ಲಿ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನ.೧೪ ಮತ್ತು ನ.೧೫ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ತಿಳಿಸಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಾಗುವುದು.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.
ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
ಇ-ಟಿಕೇಟ್ ಬುಕಿಂಗ್‌ನ್ನು ವೆಬ್‌ಸೈಟ್ ಮೂಲಕವೂ ಮಾಡಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ.೫ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.೧೦ರಷ್ಟು ರಿಯಾಯಿತಿ ನೀಡಲಾಗುವುದು.