ದುಶ್ಚಟ ಮುಕ್ತ ಸಮಾಜ ನಿರ್ಮಾಣ ಎಲ್ಲರ ಹೊಣೆ

ಬೀದರ:ಜೂ.1: ‘ತಂಬಾಕು ಉತ್ಪನ್ನಗಳ ಚಟದಿಂದ ಯುವಕರನ್ನು ಮುಕ್ತಗೊಳಿಸುವುದು ಹಾಗೂ ದುಶ್ಚಟಮುಕ್ತ ಸಮಾಜ ನಿರ್ಮಿಸುವುದು ಎಲ್ಲರ ಹೊಣೆಯಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ತಂಬಾಕು ಉತ್ಪನ್ನಗಳ ಸೇವನೆ ಚಟದಿಂದ ಯುವಕರು ಹಾಗೂ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ತಿಳಿಸಿದರು.

‘ತಂಬಾಕು ವ್ಯಸನಿಗಳು ಚಟಮುಕ್ತಿಗಾಗಿ ಜಿಲ್ಲಾ ಆಸ್ಪತ್ರೆಯ ತಂಬಾಕು ವ್ಯಸನ ಮುಕ್ತಿ ಕೇಂದ್ರಕ್ಕೆ ಭೇಟಿ ಕೊಡಬೇಕು’ ಎಂದು ಹೇಳಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅಧಿಕಾರಿ ಡಾ.ಕೃಷ್ಣಾರೆಡ್ಡಿ ಮಾತನಾಡಿ, ‘ತಂಬಾಕು ಉತ್ಪನ್ನಗಳಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದರು.
‘ನೆರೆದವರಿಗೆ ತಂಬಾಕು ತ್ಯಜಿಸಲು ಬದ್ಧರಾಗಿ ಎನ್ನುವ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಡಾ. ರಾಜಶೇಖರ ಪಾಟೀಲ, ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವಶಂಕರ ಬಿ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಸಂಗಾರೆಡ್ಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಂಗಪ್ಪ ಕಾಂಬಳೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಕಾಶ ವಗ್ಗೆ, ಮಹೇಶ ಬಿ, ಸುದರ್ಶನ ರೆಡ್ಡಿ ಇದ್ದರು.