ದೇಶದಲ್ಲಿ ಕೊರೊನಾ ತುಸು ಇಳಿಕೆ ಆದರೂ ತಪ್ಪದ ಆತಂಕ

ನವದೆಹಲಿ, ಮಾ.೩೦- ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿನ ಎರಡನೇ ಅಲೆಯ ತೀವ್ರತೆ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿದೆ. ನಿನ್ನೆಗಿಂತ ಇಂದು ತುಸು ಸೋಂಕಿತರ ಸಂಖ್ಯೆ ಕಡಿಮೆಯಾಗಿರುವುದು ನಿರಾಳಭಾವ ತರಿಸಿದರೂ ಆತಂಕ ಮಾತ್ರ ದೂರವಾಗಿಲ್ಲ.
ಕಳೆದ ೨೪ ಗಂಟೆಗಳಲ್ಲಿ ದೇಶದಲ್ಲಿ ೫೬,೨೧೧ ಮಂದಿಗೆ ಹೊಸದಾಗಿ ಸೋಂಕು ಪ್ರಕರಣಗಳು ಪತ್ತೆ ಆಗಿವೆ. ಈ ಮೂಲಕ ದೇಶದಲ್ಲಿ ಒಟ್ಟಾರೆ ಜನಸಂಖ್ಯೆ ೧,೨೦,೯೫,೮೫೫ ಏರಿಕೆಯಾಗಿದೆ.
ಇಂದು ಬೆಳಿಗ್ಗೆ ೮ ಗಂಟೆ ತನಕ ೨೭೧ ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ೩೭,೦೨೮ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಕಾಣಿಸಿಕೊಂಡಿರುವ ಹೊಸ ಸೋಂಕು ಸಂಖ್ಯೆ ಸೇರಿದಂತೆ ಇದುವರೆಗೂ ೧ ,೨೦, ೯೫, ೮೫೫ ಏರಿಕೆಯಾಗಿದೆ. ಒಟ್ಟಾರೆ ಸೋಂಕಿತರ ಪೈಕಿ ಇಲ್ಲಿಯವರೆಗೆ ೧,೧೩,೯೩,೦೨೧ ಮಂದಿ ಗುಣಮುಖರಾಗಿದ್ದಾರೆ. ೧,೬೨,೧೧೪ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಸಚಿವಾಲಯ ತನ್ನ ಮಾಹಿತಿಯಲ್ಲಿ ತಿಳಿಸಿದೆ.
ಮಹಾರಾಷ್ಟ್ರ-ಕರ್ನಾಟಕ, ಪಂಜಾಬ್, ಹರಿಯಾಣ, ಕೇರಳ, ತಮಿಳುನಾಡು, ಮಧ್ಯಪ್ರದೇಶ ಸೇರಿದಂತೆ, ವಿವಿಧ ರಾಜ್ಯಗಳಲ್ಲಿ ಸೋಂಕು ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಸೋಂಕು ಮತ್ತು ಸಕ್ರಿಯ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿದೆ.
೫.೪೦ ಲಕ್ಷ ಸಕ್ರಿಯ ಪ್ರಕರಣ
ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ನಿತ್ಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ರಾಕೆಟ್ ವೇಗದಲ್ಲಿ ಹೆಚ್ಚಾಗುತ್ತಿದೆ.
ದೇಶದ ಎಂಟು ರಾಜ್ಯಗಳಲ್ಲಿ ಸೋಂಕು ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿರೀಕ್ಷೆಗೂ ಮೀರಿ ಸಕ್ರಿಯ ಪ್ರಕರಣಗಳು ಏರಿಕೆಯಾಗುತ್ತದೆ. ಸದ್ಯ ದೇಶದಲ್ಲಿ ೫,೪೦,೭೨೦ ಸಕ್ರಿಯ ಪ್ರಕರಣಗಳಿವೆ.
ದೇಶದ ವಿವಿಧ ರಾಜ್ಯಗಳಲ್ಲಿ ಸೋಂಕು ಮತ್ತು ಸಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ.

೬.೧೧ ಕೋಟಿಗೆ ಲಸಿಕೆ
ದೇಶದ ಕೆಲವು ರಾಜ್ಯಗಳಲ್ಲಿ ಸೋಂಕು ಸಂಖ್ಯೆ ನಿತ್ಯ ಏರಿಕೆಯಾಗುತ್ತಿರುವ ನಡುವೆಯೇ ಸೋಂಕಿಗೆ ಲಸಿಕೆ ಹಾಕುವ ವೇಗವೂ ಹೆಚ್ಚಾಗಿದೆ.
ಇದುವರೆಗೂ ದೇಶದಲ್ಲಿ ೬,೧೧,೧೩,೩೫೪ ಮಂದಿಗೆ ಲಸಿಕೆ ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ನಿತ್ಯ ಸೋಂಕು ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ನೀಡಿಕೆ ಪ್ರಮಾಣವನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಗಣನೀಯವಾಗಿ ಮಾಡುವಂತೆ ಕೇಂದ್ರ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.