ದೇಶದಲ್ಲಿ ದಾಖಲೆ ಮಟ್ಟದಲ್ಲಿ ಸೋಂಕು ಏರಿಕೆ

ನವದೆಹಲಿ,ಏ.೩- ದೇಶದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಮಿತಿಮೀರಿದ್ದು ನಿತ್ಯ ಸೋಂಕು ಸಂಖ್ಯೆ ದಾಖಲೆಯ ಮಟ್ಟದಲ್ಲಿ ಏರಿಕೆಯಾಗುತ್ತಿರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಆತಂಕಕ್ಕೆ ಸಿಲುಕಿಸಿದೆ.
ಸರಿಸುಮಾರು ಏಳು ತಿಂಗಳ ಬಳಿಕ ದೇಶದಲ್ಲಿ ದಾಖಲೆಯ ಏರಿಕೆ ಕಂಡಿದೆ. ಕಳೆದ ೨೪ ಗಂಟೆಗಳಲ್ಲಿ ೮೯,೧೨೯ ಮಂದಿಗೆ ಸೋಂಕು ತಗುಲಿದ್ದು ೭೧೪ ಮಂದಿ ಮೃತಪಟ್ಟಿದ್ದಾರೆ. ಈ ಅವಧಿಯಲ್ಲಿ ೪೪,೨೦೨ ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ
ಇಂದು ಬೆಳಗ್ಗೆ ೮ ಗಂಟೆಯ ತನಕ ಹೊಸದಾಗಿ ದಾಖಲಾಗಿರುವ ಸೋಂಕು ಪ್ರಕರಣಗಳು ಸೇರಿದಂತೆ ಇಲ್ಲಿಯವರೆಗೆ ದೇಶದಲ್ಲಿ ೧,೨೩,೯೨,೨೬೦ ಮಂದಿಗೆ ಸೋಂಕು ಏರಿಕೆಯಾಗಿದೆ. ಇದುವರೆಗೂ ಒಟ್ಟಾರೆ
೧,೧೫,೬೯,೨೪೧ ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ಇಲ್ಲಿಯ ತನಕ ೧,೬೪,೧೧೦ ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ದಾಖಲಾಗಿರುವ ಒಟ್ಟಾರೆ ಸೋಂಕು ಸಂಖ್ಯೆ ಪೈಕಿ ಮಹಾರಾಷ್ಟ್ರ ಒಂದರಲ್ಲಿ ೪೮ ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ಕಾಣಿಸಿಕೊಂಡಿದೆ .ಇದು ಮಹಾರಾಷ್ಟ್ರದಲ್ಲಿ ಸೋಂಕಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದಕ್ಕೆ ನಿದರ್ಶನವಾಗಿದೆ.
೬.೫೮ ಲಕ್ಷ ಸಕ್ರಿಯ ಪ್ರಕರಣ:
ದೇಶದಲ್ಲಿ ನಿತ್ಯ ಕೊರೋನಾ ಸೋಂಕಿನ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಸತ್ರಿಯ ಪ್ರಕರಣಗಳ ಸಂಖ್ಯೆಯು ರಾಕೆಟ್ ವೇಗದಲ್ಲಿ ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ದೇಶದ ಕೆಲವು ರಾಜ್ಯಗಳಲ್ಲಿ ನಿತ್ಯ ದಾಖಲೆ ಪ್ರಮಾಣದಲ್ಲಿ ಸೋಂಕು ಏರಿಕೆಯಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ನಾಗಾಲೋಟದಲ್ಲಿ ಸಾಗುತ್ತಿದೆ.
ಸದ್ಯ ದೇಶದಲ್ಲಿ ೬,೫೮,೯೦೯ ಮಂದಿಗೆ ಸಕ್ರಿಯ ಪ್ರಕರಣ ಇದೆ ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಇದು ಆತಂಕಕಾರಿ ಬೆಳವಣಿಗೆ ಎಂದು ಸಚಿವಾಲಯ ತಿಳಿಸಿದೆ

೭.೩೦ ಕೋಟಿಗೆ ಲಸಿಕೆ
ದೇಶದಲ್ಲಿ ಒಂದು ಕಡೆ ಸೋಂಕು ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ ಮತ್ತೊಂದು ಕಡೆ ಲಸಿಕೆ ಹಾಕುವ ವೇಗವನ್ನೂ ಕೇಂದ್ರ ಸರ್ಕಾರ ಹೆಚ್ಚು ಮಾಡಿದೆ.
ದೇಶದಲ್ಲಿ ಇಲ್ಲಿಯವರೆಗೂ ಮೂರು ಹಂತಗಳಲ್ಲಿ ಲಸಿಕೆ ನೀಡಿಕೆ ಅಭಿಯಾನ ಪ್ರಗತಿಯಲ್ಲಿದ್ದು ಈವರೆಗೆ
೭,೩೦,೫೪,೨೯೫ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಕಟ್ಟುನಿಟ್ಟಿನ ಕ್ರಮ
ದೇಶದಲ್ಲಿ ನಿತ್ಯಾ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇದರ ತಡೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರಕಾರ ಸೂಚನೆ ನೀಡಿದೆ.
ಎರಡನೇ ಹಂತದ ಅಲೆ ದಾಖಲೆ ಪ್ರಮಾಣದಲ್ಲಿ ಹೆಚ್ಚಾಗುತ್ತದೆ ಈ ಪ್ರಮಾಣ ಹೀಗೆಯೇ ಸಾಗಿದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಅಪಾಯ ಎದುರಿಸಬೇಕಾಗುತ್ತದೆ. ಹೀಗಾಗಿ ಜನರು ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವಂತೆ ನೋಡಿಕೊಳ್ಳುವುದು ರಾಜ್ಯಗಳ ಕರ್ತವ್ಯ ಎಂದು ಸೂಚನೆ ನೀಡಿದೆ