ದೇಶದ ವಿವಿಧೆಡೆ ಒಮಿಕ್ರಾನ್ ಪತ್ತೆ

ನವದೆಹಲಿ,ಡಿ.೪- ಕರ್ನಾಟಕದಲ್ಲಿ ಎರಡು ಒಮಿಕ್ರಾನ್ ಸೋಂಕು ಕಾಣಿಸಿಕೊಂಡು ಆತಂಕ ಮೂಡಿಸಿರುವ ನಡುವೆಯೂ ದೇಶದ ವಿವಿಧ ರಾಜ್ಯಗಳಲ್ಲಿ ಒಮಿಕ್ರಾನ್ ಸೋಂಕು ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ವಿದೇಶದಿಂದ ಬಂದ ಪ್ರಯಾಣಿಕರ ಪೈಕಿ ದೆಹಲಿಯಲ್ಲಿ ೧೨, ತಮಿಳುನಾಡಿನಲ್ಲಿ ಮೂರು ಮತ್ತು ಕೇರಳದಲ್ಲಿ ಒಂದು ಶಂಕಿತ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಮತ್ತಷ್ಟು ಭಯದ ವಾತಾವರಣ ಸೃಷ್ಟಿಸಿದೆ.
ಈ ಹಿನ್ನಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಹದ್ದಿನ ಕಣ್ಣು ಇಡಲಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ಮೂರು ದಿನಗಳಿಂದ ಅಂತರಾಷ್ಟ್ರೀಯ ಪ್ರಯಾಣಿಕರನ್ನು ಪರೀಕ್ಷೆಗೊಳಪಡಿಸಿದ್ದು ಅದರಲ್ಲಿ ೧೨ ಮಂದಿಯಲ್ಲಿ ಸೋಂಕಿನ ಶಂಕೆ ವ್ಯಕ್ತವಾಗಿದೆ.ಈ ಬಗ್ಗೆ ಜಿನೋಮ್ ಸಿಕ್ವೆನ್ಸ್ ಪರೀಕ್ಷೆಗೆ ಕಳುಹಿಸಿದ್ದು ವರದಿಗಾಗಿ ಎದುರು ನೋಡಲಾಗುತ್ತಿದೆ.
ಎಲ್ಲಾ ಸೋಂಕಿತ ಶಂಕಿತರನ್ನು ದೆಹಲಿಯ ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಕೊರೊನಾ ಪಾಸಿಟಿವ್ ದೃಢ ಪಟ್ಟಿದ್ದು ಜಿನೋಮ್ ಪರೀಕ್ಷೆಯ ವರದಿಗಾಗಿ ಎದುರು ನೋಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಸುರೇಶ್ ಕುಮಾರ್ ತಿಳಿಸಿದ್ದಾರೆ.
೧೨ ಜನ ವಿದೇಶದಿಂದ ಬಂದವರ ಪೈಕಿ ಇಂಗ್ಲೆಂಡ್ ,ಪ್ರಾನ್ಸ್ ನಿಂದ ತಲಾ ನಾಲ್ಕು ಮಂದಿ, ತಾಂಜೇನಿಯ ಬೆಲ್ಜಿಯಂ ತಲಾ ಒಂದು ಮಂದಿ ಸೇರಿದಂತೆ ೧೨ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ಹೆಚ್ಚಿನ ಪರೀಕ್ಷೆಗೆ ಒಳಪಡಿಸಲಾಗಿದೆ ಅಲ್ಲಿಯತನಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ತ.ನಾ ೩ ಪ್ರಕರಣ:
ಇನ್ನು ತಮಿಳುನಾಡಿನಲ್ಲಿ ಮೂರು ಮಂದಿ ಅಂತರಾಷ್ಟ್ರೀಯ ಪ್ರಯಾಣಿಕರಲ್ಲಿ ಒಮಿಕ್ರಾನ್ ಸೋಂಕಿನ ಶಂಕೆ ವ್ಯಕ್ತವಾಗಿದೆ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಿಂಗಪುರ ಮತ್ತು ಇಂಗ್ಲೆಂಡ್ ನಿಂದ ಬಂದ ಮಗು ಸೇರಿದಂತೆ ಮೂವರಿಗೆ ರೋಗಲಕ್ಷಣಗಳಿಂದ ಪರೀಕ್ಷೆ ಬಂದ ಬಳಿಕ ಖಚಿತ ಮಾಹಿತಿ ಲಭ್ಯವಾಗಲಿದೆ ಎಂದು ತಮಿಳುನಾಡು ಸರ್ಕಾರದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಇಂಗ್ಲೆಂಡ್‌ನಿಂದ ಕೇರಳಕ್ಕೆ ಆಗಮಿಸಿದ ವ್ಯಕ್ತಿಯಲ್ಲಿ ಸೋಂಕು ಶಂಕೆ ವ್ಯಕ್ತವಾಗಿದೆ. ಸದ್ಯ ಈ ವ್ಯಕ್ತಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು ಹೆಚ್ಚಿನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಕೋಜಿಕೋಡ್ ಜಿಲ್ಲಾ ವೈದ್ಯಾಧಿಕಾರಿ ಡಾ.ಉಮ್ಮರ್ ಫಾರೂಕ್ ತಿಳಿಸಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ಅವರು ನೆನ್ನೆ ಸಂಜೆ ಕೋಜಿಕೋಡ್ ವಿಮಾನ ನಿಲ್ದಾಣಕ್ಕೆ ಬಂದ ವ್ಯಕ್ತಿಯಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಜೊತೆಗೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೂ ಮಾಹಿತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಗಿ ಕ್ರಮ
ಈ ನಡುವೆ ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಓಮಿಕ್ರಾನ್ ಭೀ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ವಿದೇಶದಿಂದ ಬಂದ ಪ್ರಯಾಣಿಕರು ಕಡ್ಡಾಯವಾಗಿ ಹೋಂ ಕಾರಂಟೈನ್‌ನಲ್ಲಿ ಇರಬೇಕು. ರೋಗಲಕ್ಷಣ ಇರುವವರು ಚಿಕಿತ್ಸೆ ಪಡೆಯುವಂತೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ಸೂಚನೆ ನೀಡಿದೆ.