ದ್ವಿತೀಯ ಪಿಯುಸಿ ಪರೀಕ್ಷೆ ಸುಗಮ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ನಗರದ ಕಾಲೇಜು ಪರೀಕ್ಷಾ ಕೇಂದ್ರದ ಮುಂದೆ ನಿಂತಿರುವ ವಿದ್ಯಾರ್ಥಿಗಳು.

ಬೆಂಗಳೂರು, ಮಾ.೧- ಉನ್ನತ ಶಿಕ್ಷಣಕ್ಕೆ ಭವಿಷ್ಯ ಬಾಗಿಲೆಂದೇ ಬಿಂಬಿಸಲಾಗಿರುವ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆ ಇಂದಿನಿಂದ ರಾಜ್ಯಾದ್ಯಂತ ಆರಂಣವಾಗಿದೆ. ರಾಜ್ಯದ ೧,೧೨೪ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇನ್ನೊಂದೆಡೆ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುವ ದೃಶ್ಯ ಸಾಮಾನ್ಯವಾಗಿದೆ.
ಇಂದು ಮುಂಜಾನೆಯಿಂದಲೇ ಪರೀಕ್ಷಾ ಕೇಂದ್ರಗಳತ್ತ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು ಪರೀಕ್ಷೆ ಕೊಠಡಿ ಪ್ರವೇಶಿಸಿದರು.ಇನ್ನೂ, ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಸಿ.ಸಿ. ಟಿ.ವಿ ಕ್ಯಾಮೆರಾ ಅಳವಡಿಸಲಾಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಯಾವುದೇ ಪರೀಕ್ಷಾ ಅಕ್ರಮಕ್ಕೆ ಅವಕಾಶವಾಗದೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ.
೩.೩೦ ಲಕ್ಷ ಬಾಲಕರು, ೩.೬೭ ಲಕ್ಷ ಬಾಲಕಿಯರು ಸೇರಿದಂತೆ ೬.೯೮ ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಮಾರ್ಚ್ ೨೨ರವರೆಗೆ ನಿತ್ಯ ೧೦.೧೫ರಿಂದ ಮಧ್ಯಾಹ್ನ ೧.೩೦ರವರೆಗೆ ಪರೀಕ್ಷೆಗಳು ನಡೆಯಲಿವೆ.
೨ ಸಾವಿರಕ್ಕೂ ಹೆಚ್ಚು ಉಪನ್ಯಾಸಕರನ್ನು ಖಜಾನೆಯಲ್ಲಿನ ಪ್ರಶ್ನೆ ಪತ್ರಿಕೆ ನಿಗಾಕ್ಕೆ ಹಾಗೂ ನಾಲ್ಕು ಸಾವಿರ ಉಪನ್ಯಾಸಕರನ್ನು ವಿಚಕ್ಷಣ ದಳಕ್ಕೆ ನಿಯೋಜಿಸಲಾಗಿದೆ. ಪ್ರತಿ ಕೇಂದ್ರಕ್ಕೂ ನಾಲ್ವರು ಪೊಲೀಸರನ್ನು ನಿಯೋಜಿಸಲಾಗಿದೆ.
ಅದೇ ರೀತಿ, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೇಂದ್ರಗಳ ಒಳಗೆ ಮೊಬೈಲ್ ಫೋನ್ ನಿಷೇಧಿಸಲಾಗಿದೆ. ಮುಖ್ಯ ಅಧೀಕ್ಷಕರು ತುರ್ತು ಸಂದರ್ಭಗಳಲ್ಲಿ ಮಾತ್ರ ಬಳಸಲು ಅನುಮತಿ ನೀಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಸಿ.ಸಿ. ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೇಳಿದೆ.

ಬಸ್ಸಿಗಾಗಿ ವಿದ್ಯಾರ್ಥಿಗಳ ಪರದಾಟ..!
ಹಾಸನ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರದಾಡಿದರು. ಹೌದು ಹಾಸನದಲ್ಲಿ ಇಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಿಗ್ಗೆ ೧೧ ಗಂಟೆಗೆ ಹಾಸನಕ್ಕೆ ತೆರಳಲಿದ್ದಾರೆ.
ಈ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಜನರನ್ನು ಕರೆತರಲು ಕೆಎಸ್‌ಆರ್‌ಟಿಸಿಯ ೭೦೦ ಬಸ್‌ಗಳನ್ನು ಬಳಸಲಾಗುತ್ತಿದೆ. ಇದರಿಂದ ಹಾಸನ ನಗರ ಮತ್ತು ವಿವಿಧ ಗ್ರಾಮಗಳಿಗೆ ಬಸ್ ಸಂಪರ್ಕ ಸ್ಥಗಿತಗೊಳಿಸಲಾಗಿದೆ. ಬಸ್ ಇಲ್ಲದೆ ದ್ವಿತೀಯ ಪಿಯುಸಿ ಮತ್ತು ಪದವಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದು, ಪರೀಕ್ಷಾರ್ಥಿಗಳು ಪರದಾಡಿದ್ದಾರೆ ಎನ್ನಲಾಗಿದೆ.

ಕಟ್ಟು ನಿಟ್ಟಿನ ಕ್ರಮ..!
ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಯ ಜಿಲ್ಲಾಡಳಿತ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಯನ್ನು ಆಯಾ ದಿನದಂದು ಜಿಲ್ಲಾ ಖಜಾನೆ ಕಚೇರಿಯಿಂದ ರವಾನೆಯಾಗುವಂತೆ ವ್ಯವಸ್ಥೆ ಮಾಡಿಕೊಂಡಿದೆ. ಜತೆಗೆ ಪರೀಕ್ಷಾ ಗೌಪ್ಯ ಸಾಮಗ್ರಿ (ಪ್ರಶ್ನೆ ಪತ್ರಿಕೆ)ಗಳನ್ನು ವಿತರಿಸುವ ಮಾರ್ಗಾಧಿಕಾರಿಗಳ ವಾಹನಗಳಿಗೆ ಜಿಪಿಎಸ್ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಸಲಾಗಿದೆ.

ಪ್ರತಿಬಂಧಕಾಜ್ಞೆ ಜಾರಿ..!
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾ. ೧ರಿಂದ ೨೨ರ ವರೆಗೆ ಬೆಳಿಗ್ಗೆ ೧೦.೧೫ರಿಂದ ಮಧ್ಯಾಹ್ನ ೧.೩೦ರ ವರೆಗೆ ಜರುಗಲಿವೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಸುಗಮವಾಗಿ ಜರುಗಲು ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲೆಯ ೨೩ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್ ಪರಿಮಿತಿಯೊಳಗೆ ಪರೀಕ್ಷಾ ಸಮಯದಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಇರಿಸಿಕೊಳ್ಳಲು ಅವಕಾಶವಿದ್ದು ಉಳಿದ ಎಲ್ಲ ಪರೀಕ್ಷಾ ಸಿಬ್ಬಂದಿ, ವಿದ್ಯಾರ್ಥಿಗಳು ಮೊಬೈಲ್ ಫೋನ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು, ಉಪಯೋಗಿಸುವುದನ್ನು ನಿಷೇಧಿಸಲಾಗಿದೆ.