ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ‌ ಮುಂದೂಡಿಕೆ:ಎಸ್.ಸುರೇಶ್ ಕುಮಾರ್

ಬೆಂಗಳೂರು, ಏ.25- ಇದೇ ತಿಂಗಳು 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಹೆಚ್ಚುತ್ತಿರುವ ಕೋವಿಡ್19ರ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ‌ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರುಗಳೊಂದಿಗೆ ಅಧಿಕಾರಿ ಹಂತದ ಸುದೀರ್ಘ ಚರ್ಚೆಗಳನ್ನು ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ, ವಿದ್ಯಾರ್ಥಿ ಹಿತ ಕಾಯಲು ಸರ್ಕಾರ ಬದ್ಧವಾಗಿದೆ‌ ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು  ಮುಂದುವರೆಸಬೇಕೆಂದು ಅವರು ಕಿವಿಮಾತು ತಿಳಿಸಿದ್ದಾರೆ.