ದ್ವಿಪಕ್ಷೀಯ ಸಂಬಂಧ ಭಾರತ-ಬಾಂಗ್ಲಾ ಚರ್ಚೆ


ನವದೆಹಲಿ, ಮಾ.೨೬- ಕೋವಿಡ್ ಸೋಂಕು ಕಾಣಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಬಾಂಗ್ಲಾ ಪ್ರವಾಸ ಕೈಗೊಂಡಿದ್ದಾರೆ. ಢಾಕಾದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದ್ವಿಪಕ್ಷೀಯ ಸಂಬಂಧ ಸೇರಿದಂತೆ ಭಾರತ ಬಾಂಗ್ಲಾದೇಶದ ಬಾಂಧವ್ಯ ವೃದ್ದಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ಕೋವಿಡ್ ಸಾಂಕ್ರಾಮಿಕ ರೋಗಕ್ಕೆ ಭಾರತದಿಂದ ಬಾಂಗ್ಲಾದೇಶಕ್ಕೆ ೨೦ ಲಕ್ಷ ಡೋಸ್ ಲಸಿಕೆಯನ್ನು ಉಚಿತವಾಗಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸವನ್ನು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರು ಇದೇ ವೇಳೆ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ
ವಿವಿಧ ಕಾರ್ಯಕ್ರಮ: ೩.೧೫ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ. ಅಬ್ದುಲ್ಲಾ ಮೆಮೊನ್ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಆ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಬಾಂಗ್ಲಾ ದೇಶದ ರಾಷ್ಟ್ರೀಯ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.ಸಂಜೆ ೭.೧೫ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಾಪು ಬಂಗಬಂದು ಡಿಜಿಟಲ್ ಸ್ಟುಡಿಯೋ ಗೆ ಇದೇ ವೇಳೆ ಚಾಲನೆ ನೀಡಲಿದ್ದಾರೆ.
ರಾಷ್ಟ್ರೀಯ ದಿನದಲ್ಲಿ ಭಾಗಿ: ಬಾಂಗ್ಲಾದೇಶದ ೫೦ನೇ ರಾಷ್ಟ್ರೀಯ ದಿನದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ.ಇದಕ್ಕೂ ಮುನ್ನ ಪ್ರತಿಕ್ರಿಯೆ ನೀಡಿದ ಪ್ರಧಾನಿ ನರೇಂದ್ರ ಮೋದಿಯವರು ಬಾಂಗ್ಲಾ ದೇಶದ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಮಾತುಕತೆಗೆ ಸಿದ್ಧವಿರುವುದಾಗಿ ಅವರು ಹೇಳಿದ್ದಾರೆ.
ರಾಷ್ಟ್ರಪತಿ ಶುಭಾಶಯ: ಬಾಂಗ್ಲಾದೇಶದ ೫೦ನೇ ರಾಷ್ಟ್ರೀಯ ದಿನದ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಭಾಶಯ ಕೋರಿದ್ದಾರೆ.