ಧರ್ಮದ ಹೆಸರಲ್ಲಿ ರಾಜಕಾರಣ ಬೇಡ:  ಎಸ್ ಡಿಪಿಐ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಆ.09: ನಗರದಲ್ಲಿ ನಿನ್ನೆ ಎಸ್ ಡಿಪಿಐ ಸಂಘಟನೆಯ ಕಾರ್ಯಕರ್ತರು  ಮುಂಬೈನಲ್ಲಿ ಆರ್‌ಪಿಎಫ್ ಕಾನ್‌ಸ್ಟೇಬಲ್ ನಡೆಸಿದ ಬರ್ಬರ ಹತ್ಯೆ ಖಂಡಿಸಿ ಹಾಗೂ ಹರಿಯಾಣದಲ್ಲಿ ಮುಸ್ಲಿಂ ಸಮುದಾಯದ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಮುಂಬೈನಲ್ಲಿ ಆರ್‌ಪಿಎಫ್‌ ಕಾಸ್ ಸ್ಟೇಬಲ್ ನಾಲ್ಕು ಜನರನ್ನು ಗುಂಡಿಕ್ಕಿ ಕೊಂದಿದ್ದಾನೆ. ಈ ಘಟನೆ ತೀವ್ರ ಆತಂಕ ಮೂಡಿಸಿದೆ. ಇಂತಹ ಘಟನೆಗಳು ಜರುಗದಂತೆ ಕ್ರಮ ವಹಿಸಬೇಕು. ಹರಿಯಾಣದಲ್ಲಿ ಮುಸ್ಲಿಂರು, ಮಣಿಪುರದಲ್ಲಿ ಕ್ರೈಸ್ತರಮೇಲೆ ಹಿಂಸಾಚಾರ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ಎಲ್ಲಾ ಸಮುದಾಯಗಳ ನಡುವೆ ಸೌಹಾರ್ದತೆ ಮೂಡಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿ ಮೆರವಣಿಗೆಯಲ್ಲಿ ಘೋಷಣೆ ಕೂಗಿದರು.
ಜಾತಿ- ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ಎಲ್ಲ ಧರ್ಮೀಯರು ಶಾಂತಿ- ಸೌಹಾರ್ದತೆ ಯಿಂದ ಜೀವನ ನಡೆಸುವಂತಾಗಬೇಕು. ಚುನಾವಣೆ ಹಾಗೂ ರಾಜಕೀಯ ಪ್ರೇರಿತ ಹೇಳಿಕೆಗಳ ಬಗ್ಗೆ ಸಾರ್ವಜನಿಕರು ಹೆಚ್ಚು ಗಮನ ನೀಡಬಾರದು. ರಾಜ್ಯದಲ್ಲಿ ದಲಿತಸಮುದಾಯಗಳ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ಕೆಲಸ ಸಹ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದಾಗಬೇಕು ಎಂದು ಒತ್ತಾಯಿಸಿದರು.
ನಗರದ ಹೆಚ್ ಆರ್ ಜಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಹೊರಟ ಎಸ್‌ಡಿಪಿಐನ  ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಬರೆದ ಮನವಿಪತ್ರ ಸಲ್ಲಿಸಿದರು, ಸಂಘಟನೆಯ ಜಿಲ್ಲಾಧ್ಯಕ್ಷ ಹೈದರ್‌ ಅಲಿ, ಉಪಾಧ್ಯಕ್ಷ ಮುಜೀಬ್, ಅಬೂಬ್‌ಬಕ್ಕ‌ ಸೇರಿದಂತೆ ಸಂಘಟನೆಯ ಜಿಲ್ಲಾ ಸಮಿತಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.