
ರಾಜ್ಯ ಸರ್ಕಾರದ ವಿರುದ್ಧ ಇಂದು ಕಾಂಗ್ರೆಸ್ ಭವನದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯರವರನ್ನು ಪೊಲೀಸರು ಬಂಧಿಸಿ ಕರೆದೊಯ್ಯುತ್ತಿರುವುದು.
ಬೆಂಗಳೂರು,ಮಾ.೪:ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಇಂದು ನಡೆಸಿದ ಪ್ರತಿಭಟನೆ ವೇಳೆ ನಕಲಿ ನೋಟು, ಸೂಟ್‌ಕೇಸ್‌ಗಳನ್ನು ಪ್ರದರ್ಶಿಸಿ ರೋಲ್‌ಕಾಲ್ ’ಮಾಡೆಲ್’ ವಿರೂಪಾಕ್ಷಪ್ಪ ಎಂಬ ಘೋಷಣೆಗಳನ್ನು ಕೂಗಿದರು.
ನಗರದ ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಗಳ ರೇಸ್‌ಕೋರ್ಸ್ ರಸ್ತೆಯ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟಾಗ ಪೊಲೀಸರು ಅವರನ್ನು ತಡೆದಿದ್ದು, ರಸ್ತೆಯಲ್ಲೇ ಕುಳಿತ ಕೈ ನಾಯಕರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಹಾಗೆಯೇ, ಸರ್ಕಾರದ ಭ್ರಷ್ಟಾಚಾರದ ಹಾಗೂ ಪೇ ಎಂಎಲ್‌ಎ ಎಂಬ ಪೋಸ್ಟರ್‌ಗಳನ್ನೂ ಅಂಟಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನಡೆಸಿದ ಕೈ ನಾಯಕರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.
ಸರ್ಕಾರದ ವಿರುದ್ಧ ವಾಗ್ದಾಳಿ
ಇದೇ ಸಂದರ್ಭದಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೇವಲ ಪ್ರಶಾಂತ್ ಮಾಡಾಳ್ ಅವರನ್ನು ಬಂಧಿಸುವುದಲ್ಲ, ಅವರ ತಂದೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನೂ ತಕ್ಷಣ ಬಂಧಿಸಬೇಕು ಮತ್ತು ಬೊಮ್ಮಾಯಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ದಾಖಲೆ ಕೇಳುತ್ತಾರೆ, ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಜಾರ್ಜ್ ಅವರು ತಪ್ಪು ಮಾಡದಿದ್ದರೂ ರಾಜೀನಾಮೆ ನೀಡಿದ್ದರು, ನಾನು ಜಾರ್ಜ್ ಅವರಿಗೆ ನೀವು ರಾಜೀನಾಮೆ ಕೊಡುವುದು ಬೇಡ ಎಂದು ಹೇಳಿದ್ದೆ, ಆದರೂ ಅವರು ನೈತಿಕತೆ ಆಧಾರದಲ್ಲಿ ರಾಜೀನಾಮೆ ನೀಡಿದ್ದರು.ದೇವೇಗೌಡರು ನಮ್ಮ ವಿರುದ್ಧ ಒಂದಂಕಿ ಲಾಟರಿ ಆರೋಪ ಮಾಡಿದಾಗ ಕೂಡಲೇ ಪತ್ರಿಕಾಗೋಷ್ಠಿ ಕರೆದು ಅದನ್ನು ಸಿಬಿಐ ಗೆ ವಹಿಸಿದ್ದೆ, ಪರೇಶ್ ಮೇಸ್ತಾ ಎಂಬ ಯುವಕ ಕಾಲುಜಾರಿ ಬಿದ್ದು ಸತ್ತಾಗ ಅದನ್ನು ಕೊಲೆ ಎಂದು ದೊಂಬಿ, ಗಲಾಟೆ ಎಬ್ಬಿಸಿದರು, ಅದನ್ನು ಕೂಡ ಸಿಬಿಐ ತನಿಖೆಗೆ ವಹಿಸಿದ್ದೆ, ಈ ಯಾವುದೇ ಪ್ರಕರಣದಲ್ಲಿ ನಾವು ಬಿಜೆಪಿಯವರಿಂದ ದಾಖಲೆ ಕೇಳಿಲ್ಲ, ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು ೮ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ ಎಂದರು.ಇಂದು ಆ ಎಲ್ಲಾ ಪ್ರಕರಣಗಳಲ್ಲಿ ಸಿಬಿಐ ಬಿ ರಿಪೋರ್ಟ್ ನೀಡಿದೆ. ನಮ್ಮ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ. ಈ ಬಸವರಾಜ ಬೊಮ್ಮಾಯಿಗೆ ಮಾನ ಮರ್ಯಾದೆ ಇದೆಯಾ? ಅಧಿಕಾರಕ್ಕೆ ಅಂಟಿಕೊಂಡು ಕೂತಿದ್ದಾರೆ. ಒಂದನ್ನಾದರೂ ತನಿಖೆ ಮಾಡಿಸಿದ್ರಾ ಎಂದು ಪ್ರಶ್ನಿಸಿದರು.ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸೇರಿಕೊಂಡು ಮಂತ್ರಿಗಳು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಇಂತಿಷ್ಟು ಲಂಚ ಕಲೆಕ್ಷನ್ ಮಾಡಿಕೊಡಬೇಕು ಎಂದು ನಿಗದಿ ಮಾಡಿದ್ದಾರೆ. ಅವರಿಗೆ ಈ ಬಾರಿ ಜಾತಿ, ಧರ್ಮಗಳ ಆಧಾರದಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುದು ಅರಿವಾಗಿದೆ. ಮುಂದಿನ ಚುನಾವಣೆಯಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲಲು ಕನಿಷ್ಠ ೧೦೦ ಕೋಟಿ ಖರ್ಚು ಮಾಡಿದರೂ ಆಶ್ಚರ್ಯ ಇಲ್ಲ. ಬೊಮ್ಮಾಯಿಗೆ ಮಾನ ಮರ್ಯಾದಿ ಇದ್ದರೆ ಮಾಡಾಳ್ ವಿರೂಪಾಕ್ಷಪ್ಪನನ್ನು ಈ ಕೂಡಲೇ ಬಂಧಿಸಬೇಕು ಮತ್ತು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಿಮ್ಮ ಭ್ರಷ್ಟಾಚಾರಕ್ಕೆ ಇದಕ್ಕಿಂತ ದಾಖಲೆ ಬೇರೆ ಬೇಕಾ ಎಂದು ಟೀಕಿಸಿದರು.ಈ ಪ್ರತಿಭಟನೆಯಲ್ಲಿ ಮಾಜಿ ಸಚಿವರುಗಳಾದ ರಾಮಲಿಂಗಾರೆಡ್ಡಿ, ಶಾಸಕ ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ ಹಾಗೂ ಸಲೀಂ ಅಹ್ಮದ್ ಸೇರಿದಂತೆ ಹಲವು ನಾಯಕರುಗಳು ಭಾಗಿಯಾಗಿದ್ದರು.