ನಕಲು ಮುಕ್ತ ಪಾರದರ್ಶಕ ಪರೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ


ಹಾವೇರಿ,ಮಾ.1: ಜಿಲ್ಲೆಯಲ್ಲಿ ಪಿ.ಯು.ಸಿ. ಹಾಗೂ ಎಸ್.ಎಸ್.ಸಿ. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಕಲು ಮುಕ್ತವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಫಲಿತಾಂಶ ಹೆಚ್ಚಿನ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ನಕಲಿಗೆ ಅವಕಾಶ ನೀಡಬಾರದು. ಅವರ ಸ್ವಂತ ಪ್ರತಿಭೆಯಿಂದ ಪರೀಕ್ಷೆ ಬರೆಯಬೇಕು. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಆಯೋಜಿಸಿ ಪರೀಕ್ಷೆ ಎದುರಿಸಲು ಸಿದ್ಧಗೊಳಿಸಬೇಕು ಎಂದು ಸಲಹೆ ನೀಡಿದರು.
ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಮಾದರಿ ಪ್ರಶ್ನೆಪತ್ರಿಕೆಗಳನ್ನು ಬಿಡಿಸಲು ನೀಡಬೇಕು, ವಿಶೇಷವಾಗಿ ಅವರ ಆಸಕ್ತಿಗೆ ಅನುಗುಣವಾಗಿ ಕಾಳಜಿಯಿಂದ ಪಾಠಮಾಡಬೇಕು. ಪರೀಕ್ಷೆ ಭಯವನ್ನು ಹೋಗಲಾಡಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಗಡಿಯಾರ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಜೊತೆಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕಡ್ಡಾಯವಾಗಿ ಅಳವಡಿಸಬೇಕು. ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು. ಪರೀಕ್ಷಾ ಕೇಂದ್ರಗಳಿಗ್ಗೆ ಆರೋಗ್ಯ ಸಹಾಯಕರು ಹಾಗೂ ಬಂದ್ತೋಬಸ್ತ್ಗೆ ಅಗತ್ಯ ಪೆÇಲೀಸ್ ಸಿಬ್ಬಂದಿ ನಿಯೋಜನೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಉಮೇಶಪ್ಪ ಅವರು ಮಾತನಾಡಿ, ಮಾರ್ಚ್ 9 ರಿಂದ 29ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಜಿಲ್ಲೆಯ 131 ಪದವಿ ಪೂರ್ವ ಕಾಲೇಜುಗಳ 14,699 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ 26 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಖಜಾನೆಯಲ್ಲಿ ಪ್ರಶ್ನೆ ಪತ್ರಿಗಳ ಠೇವಣಿ ಮಾಡಲು ಅಪರ ಜಿಲ್ಲಾಧಿಕಾರಿಗಳು, ಪದವಿ ಪೂರ್ವ ಶಿಕ್ಷಣ ಉಪನಿರ್ದೇಶಕರು ಹಾಗೂ ಜಿಲ್ಲಾ ಖಜಾನಾಧಿಕಾರಿಗಳ ತ್ರಿ ಸದಸ್ಯರ ಸಮತಿಯನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಜಗದೀಶ್ವರ ಅವರು ಮಾತನಾಡಿ, ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳು ಏಪ್ರಿಲ್ 1 ರಿಂದ 15ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ 10,857 ಬಾಲಕರು ಹಾಗೂ 11,595 ಬಾಲಕಿಯರು ಸೇರಿ 22,452 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದಾರೆ. 96 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಜಿಲ್ಲೆಯ ಎಲ್ಲ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮಾತನಾಡಿ, ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸಲು ರಜಾ ದಿನಗಳಲ್ಲಿಯೂ ಸಹ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ಪಾಲಕರೊಂದಿಗೆ ಸಮನ್ವಯ ಸಾಧಿಸಿ ವಿದ್ಯಾರ್ಥಿಗಳ ಓದಿನಬಗ್ಗೆ ಕಾಳಜಿವಹಿಸಲಾಗುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ, ತಹಶೀಲ್ದಾರ ಗಿರೀಶ ಸ್ವಾದಿ, ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.