ನಗರದಲ್ಲಿ ಕೊರೊನಾ ಪರೀಕ್ಷೆ ಚುರುಕು

ಬೆಂಗಳೂರು, ನ.೨೯-ಓಮಿಕ್ರಾನ್ ಹಾಗೂ ಕೇರಳ ಹಾಗೂ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರ ಮೇಲೆ ತೀವ್ರ ನಿಗಾವಹಿಸಿರುವ ಬಿಬಿಎಂಪಿ ಅಧಿಕಾರಿಗಳು, ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸುತ್ತಿರುವ ದೃಶ್ಯ ಕಂಡುಬಂದಿತು.
ನಗರದ ಪ್ರಮುಖ ಭಾಗಗಳಾದ ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ ಸೇರಿದಂತೆ ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ಚುರುಕುಗೊಂಡಿದೆ.
ಸದ್ಯ ನಿಲ್ದಾಣಗಳಲ್ಲಿ ಎರಡು ಪ್ರತ್ಯೇಕ ತಂಡಗಳನ್ನು ರಚಿಸಿ ಪ್ರಯಾಣಿಕರನ್ನು ತಪಾಸಣೆಗೊಳಪಡಿಸುವಂತೆ ಬಿಬಿಎಂಪಿ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ್ದು, ಅದರಂತೆ ಆರೋಗ್ಯ ಸಿಬ್ಬಂದಿ ಪ್ರತಿನಿತ್ಯ ಸಾವಿರಾರು ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸುತ್ತಿದ್ದಾರೆ.

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಕೊರೊನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸುತ್ತಿರುವುದು.


ಈ ಕುರಿತು ಪ್ರತಿಕ್ರಿಯಿಸಿದ ಆರೋಗ್ಯಾಧಿಕಾರಿಯೊಬ್ಬರು, ನೆರೆಯ ರಾಜ್ಯಗಳಾದ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದೆ. ರಾಜ್ಯದಲ್ಲೂ ಸೋಂಕು ಹೆಚ್ಚಳದ ಭೀತಿ ಆವರಿಸಿದ್ದು, ಕಠಿಣ ನಿಯಮಗಳನ್ನು ರೂಪಿಸಲಾಗುತ್ತಿದೆ. ಕೋವಿಡ್ ಸೋಂಕು ಯಾವ ರೀತಿಯಲ್ಲಿ ಉಲ್ಬಣಗೊಳ್ಳುತ್ತಿದೆ ಎನ್ನುವುದನ್ನು ತಿಳಿಯಲು ಪರೀಕ್ಷೆಯೊಂದೇ ಮಾನದಂಡ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ ಎಂದರು.
ಮತ್ತೊಂದೆಡೆ, ಪರೀಕ್ಷೆ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿರುವ ಪ್ರಯಾಣಿಕರು ನಾನಾ ಕಾರಣ ಹೇಳಿ ತಪ್ಪಿಸಿಕೊಳ್ಳುತ್ತಿದ್ದಾರೆ.
ಹೊರ ರಾಜ್ಯದಿಂದ ಸೋಂಕಿತರು ಬರುವುದನ್ನು ತಡೆಯಲು ಕೋವಿಡ್ ಟೆಸ್ಟ್ ಮಾಡಿಸಲಾಗುತ್ತಿದೆ.
ಇದೇ ಕಾರಣಕ್ಕೆ ರೈಲ್ವೆ, ವಿಮಾನ ನಿಲ್ದಾಣ, ಬಸ್ ನಿಲ್ದಾಣ, ರಾಜ್ಯದ ಗಡಿ ಭಾಗದಲ್ಲಿ ಎಲ್ಲಾ ಕಡೆ ಪರೀಕ್ಷೆ ನಡೆಸುವಂತೆ ಸರ್ಕಾರ ಕಟ್ಟಪ್ಪಣೆ ಹೊರಡಿಸಿದೆ. ಆದರೆ ಜನರು ಸೋಂಕು ಪರೀಕ್ಷೆಗೆ ಒಳಪಡದೆ ಪಲಾಯನ ಮಾಡುತ್ತಿದ್ದಾರೆ. ಟೆಸ್ಟ್ ಮಾಡಿಸುವುದು ನಮಗೆ ಕಷ್ಟವಾಗಿದೆ ಎಂದು ಆರೋಗ್ಯ ಕಾರ್ಯಕರ್ತರು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು.