ನಗರದಲ್ಲಿ ಹಾಸಿಗೆ ಕೊರತೆ ರೋಗಿಗಳ ಪರದಾಟ

ಬೆಂಗಳೂರು, ಏ. ೧೮- ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಪರಿಸ್ಥಿತಿ ಕೈಮೀರಿದೆ ಎಂಬುದನ್ನು ಒಪ್ಪಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಕೊರೊನಾ ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ಕ್ರಮ ಅನಿವಾರ್ಯ ಎಂದಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದೆ ಎಂಬ ವಿಚಾರವನ್ನು ಕೇಂದ್ರ ಸರ್ಕಾರವೇ ಈಗಾಗಲೇ ಹೇಳಿದೆ. ಈ ವಿಷಯ ತಮ್ಮ ಗಮನಕ್ಕೂ ಬಂದಿದೆ ಎಂದರು.
ಬೆಂಗಳೂರಿನಲ್ಲಿ ಕೊರೊನಾ ಸ್ಥಿತಿ ಕೈ ಮೀರಿದೆ. ಹಾಗಾಗಿ ಕೊರೊನಾ ತಡೆಗೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳುವ ಅನಿವಾರ್ಯತೆ ಇದೆ ಎಂದರು.
ಬೆಂಗಳೂರಿನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ನಾಳೆ ಕಂದಾಯ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ ಜನಪ್ರತಿನಿಧಿಗಳ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕೆಲವು ಕಠಿಣ ಕ್ರಮಗಳನ್ನು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದರು.
ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಇಂದು ಭೇಟಿ ಮಾಡಿ ಬೆಂಗಳೂರಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಚರ್ಚೆ ನಡೆಸುತ್ತೇನೆ ಎಂದರು.
ನಿನ್ನೆ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ. ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳನ್ನು ಅವರ ಗಮನಕ್ಕೆ ತಂದಿರುವುದಾಗಿ ಅವರು ತಿಳಿಸಿದರು.
ಬೆಂಗಳೂರಿನ ಮಟ್ಟಕ್ಕೆ ಕಠಿಣ ಕ್ರಮ ಅನಿವಾರ್ಯ.ಬಿಗಿ ಕ್ರಮ ಕೈಗೊಳ್ಳದೆ ಹೋದರೆ ಪರಿಸ್ಥಿತಿ ಮತ್ತಷ್ಟು ಕೈಮೀರಬಹುದು ಎಂದು ಅವರು ಹೇಳಿದರು.
ಆಕ್ಸಿಜನ್ ಕೊರತೆ ಇಲ್ಲ
ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಸಾಕಷ್ಟು ದಾಸ್ತಾನು ಇದೆ ಎಂದರು.
ಕೆಲವು ಖಾಸಗಿ ಆಸ್ಪತ್ರೆಗಳು ಹಣ ಪಾವತಿ ಮಾಡದೇ ಇರುವುದರಿಂದ ಅವರಿಗೆ ಆಕ್ಸಿಜನ್ ಸಿಕ್ಕಿಲ್ಲ. ಇದನ್ನೇ ಆಕ್ಸಿಜನ್ ಕೊರತೆ ಎನ್ನುವುದು ಸರಿಯಲ್ಲ. ಖಾಸಗಿ ಆಸ್ಪತ್ರೆಗಳ ಒಕ್ಕಟೂ ಫನಾ ಅವರ ಜತೆ ಮಾತನಾಡಿದ್ದೇನೆ ಎಂದು ಅವರು ಹೇಳಿದರು.
ರಾಜ್ಯಕ್ಕೆ ಪ್ರತಿದಿನ ೨೦೦ ಮೆಟ್ರಿಕ್ ಟನ್ ಆಕ್ಸಿಜನ್ ಬೇಕು. ನಮ್ಮ ಬಳಿ ೩೦೦ ಮೆಟ್ರಿಕ್ ಟನ್ ಆಕ್ಸಿಜನ್ ಇದೆ. ಯಾವುದೇ ಕೊರತೆ ಇಲ್ಲ. ಕೇಂದ್ರದಿಂದ ೩೦೦ ಮೆಟ್ರಿಕ್ ಆಕ್ಸಿಜನ್ ರಾಜ್ಯಕ್ಕೆ ಹಂಚಿಕೆಯಾಗಿದೆ ಎಂದರು.
೮೦೦ ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದನೆ ಮಾಡುವ ಶಕ್ತಿ ನಮ್ಮಲ್ಲಿದೆ. ಹಾಗಾಗಿ ಆಕ್ಸಿಜನ್ ಕೊರತೆ ಇದೆ ಎಂಬ ತಪ್ಪು ವರದಿಗಳನ್ನು ಪ್ರಕಟಿಸಬೇಡಿ ಎಂದು ಅವರು ಮಾಧ್ಯಮಗಳಿಗೆ ಮನವಿ ಮಾಡಿದರು.
ಬೆಂಗಳೂರಿನಲ್ಲಿ ಐಸಿಯು ಬೆಡ್‌ಗಳ ಸಮಸ್ಯೆ ಇದೆ. ಇಲ್ಲ ಎಂದು ನಾನು ಹೇಳಿಲ್ಲ. ಈ ಸಮಸ್ಯೆ ಪರಿಹಾರಕ್ಕೆ ವಲಯ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿ ಎಲ್ಲರಿಗೂ ಚಿಕಿತ್ಸೆ ಸಿಗುವಂತೆ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇವೆ ಎಂದು ಅವರು ಹೇಳಿದರು.