
ಬೆಂಗಳೂರು, ಜು ೭: ಮುಂಗಡ ಪತ್ರದಲ್ಲಿ ರೈತರಿಗೆ ಹೆಚ್ಚಿನ ಒತ್ತು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷಿಭಾಗ್ಯ ಯೋಜನೆಯನ್ನು ಮರು ಜಾರಿ ಮಾಡುವುದಾಗಿ ಪ್ರಕಟಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಯೋಜನೆ ಅತ್ಯಂತ ಉಪಯುಕ್ತವಾಗಿತ್ತು. ಈ ಬಾರಿ ಈ ಯೋಜನೆಯನ್ನು ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯೊಂದಿಗೆ ಸಂಯೋಜಿಸಿ ನೂರು ಕೋಟಿ ರೂ. ವೆಚ್ಚದಲ್ಲಿ ಮರು ಜಾರಿಗೊಳಿಸುವುದಾಗಿ ಪ್ರಕಟಿಸಿದ್ದಾರೆ.
ವಿಧಾನಸಭೆಯಲ್ಲಿಂದು ಪ್ರಸಕ್ತ ಸಾಲಿನ ಮುಂಗಡ ಪತ್ರ ಮಂಡಿಸಿದ ಸಿದ್ದರಾಮಯ್ಯ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹತ್ತು ಹಲವು ಯೋಜನೆಗಳನ್ನು ಪ್ರಸ್ತಾಪಿಸಿದ್ದಾರೆ.
ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ, ಕೃಷಿ ಮಾರುಕಟ್ಟೆಗೆ ನಾವೀನ್ಯತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ನವೋದ್ಯಮ ಎಂಬ ಹೊಸ ಯೋಜನೆ ಜಾರಿಗೆ ತರಲು ಮುಂದಾಗಿದ್ದು, ಇದಕ್ಕಾಗಿ ೧೦ ಕೋಟಿ ರೂ. ಮೀಸಲಿಡಲಾಗಿದೆ ಎಂದರು.
ರೈತರು ಬೆಳೆದ ಉತ್ಪನ್ನಗಳಿಗೆ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ನಂದಿನಿ ಮಾದರಿಯಲ್ಲಿ ರೈತ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆ ರೂಪಿಸಲು ೧೦ ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿದರು.
ರೈತ ಉತ್ಪಾದಕ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ ತಾಲೂಕುಗಳ ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕ್‌ಗಳು ನೀಡುವ ೨೦ ಲಕ್ಷ ರೂ.ವರೆಗಿನ ಸಾಲಕ್ಕೆ ಶೇ.೪ ರ ಬಡ್ಡಿ ಸಹಾಯಧನ ನೀಡಲಾಗುವುದು ಎಂದು ಹೇಳಿದರು.
ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಪೂರೈಸುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಈ ಬಾರಿಯ ಬಜೆಟ್‌ನಲ್ಲಿ ಈ ಕೇಂದ್ರಗಳನ್ನು ಮತ್ತಷ್ಟು ಬಲಪಡಿಸಿ ಇವುಗಳಲ್ಲಿ ೩೦೦ ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಹಂತಹಂತವಾಗಿ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ೧೦೦ ಹಬ್‌ಗಳನ್ನು ಸ್ಥಾಪಿಸಲು ೫೦ ಕೋಟಿ ರೂ. ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.