ನವಭಾರತ ಸಾಕ್ಷರತಾ ಕಾರ್ಯಕ್ರಮ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚನೆ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಅ.27:- ಜಿಲ್ಲೆಯಲ್ಲಿ 15 ವರ್ಷ ಮೇಲ್ಪಟ್ಟ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿಸಲು ಉಲ್ಲಾಸ್ ನವಭಾರತ ಸಾಕ್ಷರತಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನವಭಾರತ ಸಾಕ್ಷರತಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಯಸ್ಕರ ಶಿಕ್ಷಣ ಎಂಬುದು ಪ್ರಸ್ತುತ ಎಲ್ಲರಿಗೂ ಶಿಕ್ಷಣ ಎಂದು ಬದಲಾಗಿದೆ. 15 ವರ್ಷ ಮೇಲ್ಪಟ್ಟ ಅನಕ್ಷರಸ್ಥರಿಗೆ ಓದು, ಬರಹ, ಸುಲಭ ಲೆಕ್ಕಾಚಾರ ಮಾಡುವುದನ್ನು ಬುನಾದಿ ಶಿಕ್ಷಣದ ಜೊತೆಗೆ ಕೌಶಲ್ಯಾಭಿವೃದ್ದಿ, ಚಟುವಟಿಕಾಭಿವೃದ್ದಿ, ಮುಂದುವರೆದ ಶಿಕ್ಷಣ, ಡಿಜಿಟಲ್ ಸಾಕ್ಷರತೆ ಕುರಿತು ಅರಿವು ಮೂಡಿಸಬೇಕಿದೆ. ನವಭಾರತ ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ ಒಟ್ಟಾರೆ ಸಾಕ್ಷರತಾ ಪ್ರಮಾಣವನ್ನ ಹೆಚ್ಚಳ ಮಾಡಬೇಕಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಸಾಕ್ಷರತೆ ಮೂಲಕ ಅನಕ್ಷರಸ್ಥರಲ್ಲಿ ಸ್ವಾವಲಂಬನೆ ಹೆಚ್ಚಿಸಬೇಕಿದೆ. ನಿರಂತರ ಕಲಿಕೆ ಮೂಲಕ ಜೀವನಮಟ್ಟ ಸುಧಾರಣೆ, ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಬೇಕಿದೆ. ನಗರ ಗ್ರಾಮೀಣ ಪ್ರದೇಶಗಳ ಮಧ್ಯೆ ಇರುವ ಸಾಕ್ಷರತಾ ಪ್ರಮಾಣದ ಅಂತರ ಕಡಿಮೆ ಮಾಡಬೇಕಿದೆ. ಜನಗಣತಿ ಸಮೀಕ್ಷೆ ಪ್ರಕಾರ ಸಾಕ್ಷರತಾ ಪ್ರಮಾಣ ಮಾಹಿತಿಯೊಂದಿಗೆ ಜಿಲ್ಲೆಯ ಸಾಕ್ಷರರ ಸಂಖ್ಯೆ ಹೆಚ್ಚು ಮಾಡಲು ವಿಶೇಷ ಆದ್ಯತೆ ನೀಡಬೇಕು ಎಂದರು.
ಗ್ರಾಮ ಪಂಚಾಯಿತಿಗಳ ಪಾತ್ರ ಸಂಪೂರ್ಣ ಸಾಕ್ಷರತಾ ಆಂದೋಲನ ಕಾರ್ಯಕ್ರಮದಲ್ಲಿ ಪ್ರಮುಖವಾಗಿದೆ. ಚುನಾಯಿತ ಪ್ರತಿನಿಧಿಗಳ ಸಹಕಾರ ಪಡೆಯಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿಗಳ ಅಧಿಕಾರಿಗಳನ್ನು ತೊಡಗಿಸಿಕೊಂಡು ನವಭಾರತ ಸಾಕ್ಷರತಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಆಂದೋಲನ ಮಾದರಿಯಲ್ಲಿ ಕಾರ್ಯಕ್ರಮ ನಿಗದಿ ಮಾಡಿಕೊಂಡು ಸಂಪೂರ್ಣ ಸಾಕ್ಷರತೆ ಸಾಧಿಸುವಲ್ಲಿ ಮುಂದಾಗಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಗ್ರಾಮ ಪಂಚಾಯಿತಿಗಳಲ್ಲಿ ಸ್ವಯಂ ಸೇವಕ ಬೋಧಕರ ಮೂಲಕ ಬೋಧನೆ ಮಾಡಿಸಿ ಮೌಲ್ಯಮಾಪನ ಒಳಪಡಿಸುವ ಪ್ರಕ್ರಿಯೆ ನಡೆಯಬೇಕು. ಸ್ವಯಂ ಸೇವಕ ಬೋಧಕರನ್ನು ನಿಯೋಜಿಸಿಕೊಳ್ಳುವಾಗ ವಿದ್ಯಾರ್ಥಿಗಳನ್ನು ಸಹ ತೊಡಗಿಸಿಕೊಳ್ಳಬಹುದು. ಇದರಿಂದ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ ಮನೋಭಾವ ಬೆಳೆಸಲು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಉತ್ತೇಜನ ನೀಡಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ನವಭಾರತ ಸಾಕ್ಷರತಾ ಕಾರ್ಯಕ್ರಮ ಕುರಿತ ಪೋಸ್ಟರ್, ಕಿರು ಹೊತ್ತಿಗೆ ಹಾಗೂ ಮಡಿಕೆ ಪತ್ರಗಳನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಬಿಡುಗಡೆ ಮಾಡಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೆಶಕರಾದ ರಾಮಚಂದ್ರರಾಜೇಅರಸ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಕಾಶಿನಾಥ್, ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿ ಜಿ.ಎ. ಲೋಕೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೆಶಕರಾದ ಮಂಜುನಾಥ ಪ್ರಸನ್ನ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರಾದ ಗೀತಾಲಕ್ಷ್ಮಿ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಅಧಿಕಾರಿ ಡಾ. ರವಿಕುಮಾರ್, ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.